ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ದೆಹಲಿಯ ಜಂತರ್ ಮಂತರ್ ಹಾಗೂ ಇತರ ರಾಜ್ಯಗಳಲ್ಲಿ ಪ್ರತಿಭಟನೆ ನಡೆಸಿದವರ ಮೇಲೆ ಪೊಲೀಸರು ಮತ್ತು ಅರೆಸೇನಾ ಪಡೆಗಳು ಅತಿಯಾದ ಬಲಪ್ರಯೋಗ ನಡೆಸಿವೆ ಎಂಬ ಆರೋಪಗಳ ತನಿಖೆಗಾಗಿ ಸುಪ್ರೀಂ ಕೋರ್ಟ್ ಗುರುವಾರ ಐವರು ಸದಸ್ಯರ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು ಈ ಆದೇಶವನ್ನು ಹೊರಡಿಸಿದೆ. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್. ಸುಭಾಷ್ ರೆಡ್ಡಿಅವರ ಅಧ್ಯಕ್ಷತೆಯಲ್ಲಿ ಈ ಸಮಿತಿ ಕಾರ್ಯನಿರ್ವಹಿಸಲಿದೆ.
ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ರವಿಶಂಕರ್ ಝಾ, ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಶಾಲಿಂದರ್ ಕೌರ್, ಮಾಜಿ ಸಿಬಿಐ ನಿರ್ದೇಶಕ ರಿಷಿ ಕುಮಾರ್ ಶುಕ್ಲಾ ಹಾಗೂ ಮೇಘಾಲಯದ ನಿವೃತ್ತ ಡಿಜಿಪಿ ಎಲ್.ಆರ್. ಬಿಷ್ಣೋಯ್ ಅವರು ಈ ಸಮಿತಿಯ ಇತರ ಸದಸ್ಯರಾಗಿದ್ದಾರೆ.
ಪ್ರತಿಭಟನೆಯ ವೇಳೆ ಮಹಿಳಾ ಪ್ರತಿಭಟನಾಕಾರರ ಮೇಲೆ ನಡೆದಿದೆ ಎನ್ನಲಾದ ಕಿರುಕುಳ ಹಾಗೂ ಲೈಂಗಿಕ ದೌರ್ಜನ್ಯದ ಆರೋಪಗಳ ತನಿಖೆಗೆ ಸಮಿತಿ ಮೊದಲ ಆದ್ಯತೆ ನೀಡಬೇಕು ಮತ್ತು ತೀವ್ರ ಗಾಯಗೊಂಡವರ ಕುರಿತು ತನಿಖೆ ನಡೆಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ಪ್ರತಿಭಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳು, ಡ್ರೋನ್ ರೆಕಾರ್ಡಿಂಗ್‌ಗಳು, ಬಾಡಿ-ಕ್ಯಾಮ್ ದೃಶ್ಯಗಳು ಹಾಗೂ ಪಿಸಿಆರ್ ಕರೆಗಳ ದಾಖಲೆಗಳನ್ನು ಯಾವುದೇ ತಿರುಚುವಿಕೆ ಇಲ್ಲದಂತೆ ಸುರಕ್ಷಿತವಾಗಿ ಕಾಪಾಡಬೇಕು. ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗದ ಹೊರತು ವಶಕ್ಕೆ ಪಡೆದುಕೊಂಡಿರುವ ಎಲ್ಲಾ ಅಪ್ರಾಪ್ತ ಪ್ರತಿಭಟನಾಕಾರರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆದೇಶಿಸಿದೆ.
ಪ್ರತಿಭಟನಾಕಾರರ ವೈಯಕ್ತಿಕ ವಿವರಗಳು ಮತ್ತು ಡೇಟಾವನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಬಾರದು ಎಂದು ಪೊಲೀಸರಿಗೆ ತಾಕೀತು ಮಾಡಲಾಗಿದೆ. ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳಲು ಸಮಿತಿಯ ವರದಿಗಾಗಿ ಕಾಯುವ ಅಗತ್ಯವಿಲ್ಲ; ಸಂಬಂಧಪಟ್ಟ ಅಧಿಕಾರಿಗಳು ಸ್ವತಂತ್ರವಾಗಿ ಕ್ರಮ ಜರುಗಿಸಬಹುದು ಎಂದು ಸ್ಪಷ್ಟಪಡಿಸಲಾಗಿದೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಸಾವಿರಾರು ವಿದ್ಯಾರ್ಥಿಗಳು ಮತ್ತು ಸಂಘಟನೆಗಳು ಸಂಸತ್ ಚಲೋ ಕರೆ ನೀಡಿದ್ದವು. ಈ ವೇಳೆ ಪೊಲೀಸರು ಅಶ್ರುವಾಯು ಮತ್ತು ಲಾಠಿ ಪ್ರಹಾರ ನಡೆಸಿ ಹಲವರನ್ನು ಬಂಧಿಸಿದ್ದರು.
Laxmi News 24×7