ಬೆಳಗಾವಿ: ‘ಕೋವಿಡ್-19 ನಂತರದ ಕಾಲಘಟ್ಟದಲ್ಲಿ ವೈದ್ಯಕೀಯ ತ್ಯಾಜ್ಯದ ಪ್ರಮಾಣ ಹೆಚ್ಚಿದೆ. ಈ ತ್ಯಾಜ್ಯ ನಿರ್ವಹಣೆಗೆ ನಾವು ಪರಿಣಾಮಕಾರಿಯಾದ ಪರಿಹಾರ ಕಂಡುಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.
ಇನ್‌ಸ್ಟಿಟ್ಯೂಟ್ ಆಫ್ ಎನ್ವಿರಾನ್ಮೆಂಟ್ ಮತ್ತು ಹಜಾರ್ಡಸ್ ಮೆಟೀರಿಯಲ್ಸ್ ಮ್ಯಾನೇಜ್‌ಮೆಂಟ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಯುಎಸ್‌ಎ ರಾಕ್ವಿಲೆ, ಮೇರಿಲ್ಯಾಂಡ್‌ನ ಅಲಯನ್ಸ್ ಆಫ್ ಹಜಾರ್ಡಸ್ ಮೆಟೀರಿಯಲ್ಸ್ ಪ್ರೊಫೆಷನಲ್ಸ್ ಸಂಸ್ಥೆಗಳ ಸಹಯೋಗದಲ್ಲಿ, ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು)ದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಅಪಾಯಕಾರಿ ತ್ಯಾಜ್ಯ ನಿರ್ವಹಣೆ ಮತ್ತು ಪರಿಸರ ಸಮತೋಲನ’ ಕುರಿತ ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
‘ದೇಶದ ಸುಸ್ಥಿರ ಬೆಳವಣಿಗೆಗೆ ತ್ಯಾಜ್ಯದಿಂದ ಎದುರಾಗಬಹುದಾದ ಸಮಸ್ಯೆ ಪರಿಹರಿಸಲು ಪ್ರಯತ್ನಿಸಬೇಕು. ಇಂದಿನ ವಿದ್ಯಾರ್ಥಿಗಳು ಶುದ್ಧ ಗಾಳಿ, ನೀರು ಮತ್ತು ಮಣ್ಣಿನ ರಾಯಭಾರಿಗಳಾಗಿ ಕಾರ್ಯನಿರ್ವಹಿಸಬೇಕು. ವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ ಮತ್ತು ಅಪಾಯಕಾರಿ ವಸ್ತುಗಳನ್ನು ಬೇರ್ಪಡಿಸುವ ಕುರಿತಾಗಿ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು’ ಎಂದರು.