ಬೆಂಗಳೂರು: ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಶೇಕಡ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಒಂಬತ್ತನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಇದೇ 23ರಿಂದ ಭೌತಿಕ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.
ಶನಿವಾರ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೋವಿಡ್ ದೃಢಪ್ರಮಾಣ ದರ ಶೇ 2ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಆರಂಭಿಸದೇ ಇರಲು ಸರ್ಕಾರ ನಿರ್ಣಯಿಸಿದೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಯಚೂರು, ಕಲಬುರ್ಗಿ, ಬಳ್ಳಾರಿ, ಕೊಪ್ಪಳ, ಬೀದರ್, ಹಾವೇರಿ, ವಿಜಯಪುರ, ತುಮಕೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆಯ ಪ್ರಮಾಣ ಹೆಚ್ಚಿಸಲಾಗುವುದು. ಕೋವಿಡ್ ದೃಢಪ್ರಮಾಣ ದರ ಹೆಚ್ಚಾಗಿರುವ ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಲಸಿಕೆ ನೀಡುವ ಪ್ರಮಾಣ ಹೆಚ್ಚಿಸಲಾಗುವುದು ಎಂದು ವಿವರ ನೀಡಿದರು.
Laxmi News 24×7