Breaking News

ಸಾಮಾಜಿಕ ಮಾಧ್ಯಮ, ಕೆಲ ವಾಹಿನಿಗಳಲ್ಲಿ ಸುಳ್ಳು, ಸೌಹಾರ್ದ ಕದಡುವ ಸುದ್ದಿ: ಸುಪ್ರೀಂ

Spread the love

ನವದೆಹಲಿ: ಸಾಮಾಜಿಕ ಮಾಧ್ಯಮಗಳು ಹಾಗೂ ವೆಬ್‌ಪೋರ್ಟಲ್‌ಗಳಲ್ಲಿ ಸುಳ್ಳು ಹಾಗೂ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂಥ ಸುದ್ದಿಗಳನ್ನು ಹರಡಲಾಗುತ್ತಿದೆ. ಕೆಲವು ಚಾನೆಲ್‌ಗಳು ತಾವು ಬಿತ್ತರಿಸುವ ಸುದ್ದಿಗಳಿಗೂ ಕೋಮು ಬಣ್ಣ ಬಳಿಯುತ್ತಿವೆ ಎಂದು ಸುಪ್ರೀಂಕೋರ್ಟ್‌ ಗುರುವಾರ ಕಳವಳ ವ್ಯಕ್ತಪಡಿಸಿದೆ.

ಜಮಿಯಾತ್‌ ಉಲೇಮಾ-ಐ-ಹಿಂದ್‌ ಸಂಘಟನೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ ಹಾಗೂ ಎ.ಎಸ್‌.ಬೋಪಣ್ಣ ಅವರಿರುವ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.

ದೆಹಲಿಯ ಮರ್ಕಜ್‌ ನಿಜಾಮುದ್ದೀನ್‌ನಲ್ಲಿ ನಡೆದಿದ್ದ ಧಾರ್ಮಿಕ ಸಮಾವೇಶಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಸುಳ್ಳು ಸುದ್ದಿಗಳನ್ನು ಹರಡಿದವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಸಂಸ್ಥೆ ಮನವಿ ಮಾಡಿತ್ತು.

‘ಕೆಲವು ಖಾಸಗಿ ಸುದ್ದಿ ವಾಹಿನಿಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿಗಳಿಗೆ ಕೋಮು ಬಣ್ಣ ಬಳಿಯಲಾಗುತ್ತದೆ. ಅಂತಿಮವಾಗಿ ಇದರಿಂದ ದೇಶಕ್ಕೆ ಕೆಟ್ಟ ಹೆಸರು ಬರುತ್ತದೆ’ ಎಂದು ಕಳವಳ ವ್ಯಕ್ತಪಡಿಸಿದ ನ್ಯಾಯಪೀಠ, ‘ಖಾಸಗಿ ಸುದ್ದಿವಾಹಿನಿಗಳ ನಿಯಂತ್ರಣಕ್ಕೆ ಏನಾದರೂ ಕ್ರಮ ಕೈಗೊಳ್ಳಲಾಗಿದೆಯೇ’ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತು.

‘ಸಾಮಾಜಿಕ ಮಾಧ್ಯಮಗಳಲ್ಲಿ ನ್ಯಾಯಾಧೀಶರು, ಸಂಸ್ಥೆಗಳ ವಿರುದ್ಧವೂ ಬರೆಯಲಾಗುತ್ತಿದೆ. ಇಂಥ ಕೃತ್ಯಗಳಿಗೆ ಉತ್ತರದಾಯಿತ್ವವೇ ಇರುವುದಿಲ್ಲ. ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಪ್ರಸಾರವಾಗುವ ಸುಳ್ಳು ಸುದ್ದಿಗಳ ಮೇಲೆ ನಿಯಂತ್ರಣವೇ ಇಲ್ಲ. ಯಾರು ಬೇಕಾದರೂ ಯೂಟ್ಯೂಬ್‌ ಚಾನೆಲ್‌ ಆರಂಭಿಸಬಹುದಾಗಿದೆ’ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.

‘ಸಾಮಾಜಿಕ ಮಾಧ್ಯಮಗಳು, ವೆಬ್‌ಪೋರ್ಟಲ್‌ಗಳು ಸೇರಿದಂತೆ ಆನ್‌ಲೈನ್‌ ವೇದಿಕೆಗಳ ಮೂಲಕ ಪ್ರಸಾರವಾಗುವ ಮಾಹಿತಿ ನಿಯಂತ್ರಣಕ್ಕೆ ರೂಪಿಸಿರುವ ನೂತನ ಐಟಿ ಕಾಯ್ದೆಗೆ ಸಂಬಂಧಿಸಿ ವಿವಿಧ ಹೈಕೋರ್ಟ್‌ಗಳಲ್ಲಿ ಅರ್ಜಿಗಳನ್ನು ಸಲ್ಲಿಸಲಾಗಿದೆ. ಈ ಅರ್ಜಿಗಳನ್ನು ಸುಪ್ರೀಂಕೋರ್ಟ್‌ಗೆ ವರ್ಗಾಯಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿತು.

ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಪೀಠ, ಆರು ವಾರಗಳ ನಂತರ ವಿಚಾರಣೆ ನಡೆಸುವುದಾಗಿ ಹೇಳಿತು.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ