ಚೆನ್ನೈ: ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ತಿಳಿಸಿದೆ.ಎಸ್‍ಪಿಬಿ ಆರೋಗ್ಯ ಸ್ಥಿತಿಗತಿ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಎಂಜಿಎಂ ಹೆಲ್ತ್ ಕೇರ್, ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಆಗಸ್ಟ್ 5ರಂದು ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 13ರ ತಡರಾತ್ರಿಯಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತಜ್ಞ ವೈದ್ಯರ ತಂಡದ ಅವರ ಆರೈಕೆ ಮಾಡುತ್ತಿದೆ. ಅವರ ಸಲಹೆ ಮೇರೆಗೆ ಅವರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಈಗಲೂ ಅವರ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಅವರ ಆರೋಗ್ಯದ ಕುರಿತು ನಿಗಾ ವಹಿಸಿದ್ದಾರೆ. ಕಾಳಜಿ ವಹಿಸಿ ನೋಡಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಹೇಳಿದೆ.
ಆಗಸ್ಟ್ 5ರಂದು ಶೀತ ಮತ್ತು ಜ್ವರ ಕಾಣಿಸಿಕೊಂಡು ಉಸಿರಾಟಕ್ಕೆ ತೊಂದರೆಯಾಗಿದ್ದರಿಂದ ಎಸ್‌ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯಕೀಯ ಪರೀಕ್ಷೆಯಿಂದ ಅವರಿಗೆ ಕೋವಿಡ್–19 ಸೋಂಕಿನ ಲಕ್ಷಣಗಳಿರುವುದು ದೃಢಪಟ್ಟಿತ್ತು. ಮನೆಯಲ್ಲಿಯೇ ಕ್ವಾರಂಟೈನ್ ಆಗುವಂತೆ ವೈದ್ಯರು ಸೂಚಿಸಿದ್ದರು. ಆದರೆ, ಕುಟುಂಬದ ಸದಸ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ಜುಲೈನಲ್ಲಿ ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ವಿರುದ್ಧ ಜಾಗೃತಿ ಮೂಡಿಸಲು ಸಾಹಿತಿ ವೈರಮುತ್ತು ರಚಿಸಿದ್ದ ಹಾಡಿಗೆ ಧ್ವನಿ ನೀಡಿದ್ದರು.