ಬೆಳಗಾವಿ: ಕೋವಿಡ್ ರೂಪಾಂತರಿ ವೈರಸ್ ವ್ಯಾಪಕವಾಗಿ ಹರಡುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅವರು ರಾಜ್ಯದ ಗಡಿಭಾಗದಲ್ಲಿರುವ ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಗೆ ಭಾನುವಾರ (ನ.28) ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಸರಕಾರದ ಮಾರ್ಗಸೂಚಿ ಪ್ರಕಾರ ನೆರೆಯ ಮಹಾರಾಷ್ಟ್ರ ರಾಜ್ಯದ ಮೂಲಕ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ 72 ಗಂಟೆಗಳ ಪೂರ್ವ ಅವಧಿಯ ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯವಾಗಿದೆ. ಆದ್ದರಿಂದ ನೆಗೆಟಿವ್ ವರದಿ ಹೊಂದಿದವರನ್ನು ಮಾತ್ರ ರಾಜ್ಯದೊಳಗೆ ಪ್ರಯಾಣಿಸಲು ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗಡಿಭಾಗದಲ್ಲಿರುವ ಚೆಕ್ ಪೋಸ್ಟ್ ಮೂಲಕ ಸಾಗುವ ಪ್ರತಿಯೊಂದು ವಾಹನವನ್ನು ತಡೆದು ಪ್ರಯಾಣಿಕರು ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿ ಹೊಂದಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕರ್ತವ್ಯ ನಿರತ ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಚನೆಯನ್ನು ನೀಡಿದರು.
ಇದೇ ಸಂದರ್ಭದಲ್ಲಿ ಕೆಲವು ವಾಹನಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿ ಇಲ್ಲದಿರುವುದರಿಂದ ವಾಪಸ್ ಕಳುಹಿಸಿದರು.
Laxmi News 24×7