ಬೆಳಗಾವಿ : ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಗಳವಾರ ಮತಾಂತರ ನಿಷೇಧ ಕಾಯ್ದೆ ಮಂಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಅದರಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವುದು ಪ್ರಮುಖ ನಿರ್ಧಾರವೂ ಇದೆ.
ಪ್ರತಿ ಪಕ್ಷಗಳ ವಿರೋಧದ ನಡುವೆಯೂ ಕಾಯ್ದೆಯನ್ನು ಜಾರಿಗೆ ತರಲು ಬಿಜೆಪಿ ಮುಂದಾಗಿದೆ. ವಿಧಾನಸಭೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದೆ. ಪರಿಷತ್ತಿನಲ್ಲಿ ಪೂರ್ಣ ಬಹುಮತಕ್ಕೆ ಜೆಡಿಎಸ್ ಸದಸ್ಯರ ಬೆಂಬಲ ಅನಿವಾರ್ಯವಾಗಿದೆ.
ಎರಡು ಸದನಗಳಲ್ಲಿಯೂ ಮತಾಂತರ ನಿಷೇಧ ಕಾಯ್ದೆಯನ್ನು ಈ ಬೆಳಗಾವಿ ಅಧಿವೇಶನದಲ್ಲಿಯೇ ಅನುಮೋದನೆ ಪಡೆಯುವುದು ಬಿಜೆಪಿ ಸರ್ಕಾರದ ಚಿಂತನೆ ಆಗಿದೆ. ಒಂದಿಷ್ಟು ಮಾರ್ಪಾಡುಗಳೊಂದಿಗೆ ಯಥಾವತ್ತಾಗಿ ಕಾಯ್ದೆಯನ್ನು ಜಾರಿಗೆ ತರಲು ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ನೀಡಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ನಾಳೆಯೇ ವಿಧೇಯಕ ಮಂಡಿಸುತ್ತೇವೆ ಎಂದು ತಿಳಿಸಿದ್ದಾರೆ. ಆರ್ ಅಶೋಕ್ ಸೇರಿದಂತೆ ಹಲವು ಸಚಿವರು ಸಹ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಹಿಂದಿನ ಸಚಿವ ಸಂಪುಟ ಸಭೆಯ ಅಜೆಂಡಾದಲ್ಲಿ ಮತಾಂತರ ನಿಷೇಧ ಕಾಯ್ದೆ ವಿಚಾರ ಪ್ರಸ್ತಾಪ ಆಗಿರಲಿಲ್ಲ. ಆದರೆ, ಸಭೆಯಲ್ಲಿ ಸಚಿವ ಸಂಪುಟ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ ಪಡೆದ ಸಿಎಂ ಕಾಯ್ದೆ ಜಾರಿಗೆ ತರುವ ನಿಟ್ಟಿನಲ್ಲಿ ಪ್ರಮುಖ ನಿರ್ಧಾರ ಕೈಗೊಂಡಿದ್ದಾರೆ.