ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಪೀರಣವಾಡಿ ಗ್ರಾಮದಲ್ಲಿನ ಸಂಗೋಳಿ ರಾಯಣ್ಣ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಸಂಗೋಳಿ ರಾಯಣ್ಣ ವೃತ್ತದಲ್ಲಿ ಕನ್ನಡಪರ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಇದೇ ವೇಳೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಮರು ಸ್ಥಾಪನೆಗೆ ಆಗ್ರಹಿಸಲಾಯಿತು.
ಸಂಕೇಶ್ವರ ಪಟ್ಟಣದ ಬೀರದೇವರ ದೇವಸ್ಥಾನದಿಂದ ಸಂಗೋಳಿ ರಾಯಣ್ಣ ವೃತ್ತದವರೆಗೆ ರಾಯಣ್ಣ ಅಭಿಮಾನಿಗಳು ಪಾದಯಾತ್ರೆ ನಡೆಸಿ ಪ್ರತಿಭಟನೆ ನಡೆಸಿದರು. ಸ್ವಾತಂತ್ರ್ಯ ದಿನಾಚರಣೆ ದಿನದಂದು ಪೀರಣವಾಡಿಯಲ್ಲಿ ರಾಯಣ್ಣ ಪ್ರತಿಮೆಯನ್ನು ಜಿಲ್ಲಾಡಳಿತ ತೆರವುಗೊಳಿಸಿರುವುದು ಕನ್ನಡಿಗರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರನಿಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಅಪಮಾನ ಮಾಡಿದೆ. ಕೂಡಲೇ ಜಿಲ್ಲಾಡಳಿತ ಎಚ್ಚೆತಕೊಂಡು ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮರು ಸ್ಥಾಪನೆ ಮಾಡಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಉಪ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಕನ್ನಡ ಪರ ಸಂಘಟನೆಗಳು, ದಲಿತ ಸಂಘಟನೆಗಳು, ವಾಲ್ಮೀಕಿ ಸಂಘ, ಹಾಲುಮತ ಸಮಾಜ ಸೇರಿದಂತೆ ರಾಯಣ್ಣ ಅಭಿಮಾನಿಗಳು ಪಾಲ್ಗೊಂಡಿದ್ದರು.