ಬೆಂಗಳೂರು: ಲಾರ್ಡ್ ಮೆಕಾಲೆ ತಳಹದಿಯ ಶಿಕ್ಷಣ ವ್ಯವಸ್ಥೆಗೆ ಇಂದು ನಾವು ವಿದಾಯ ಹೇಳುವ ಕ್ಷಣ ಸನ್ನಿಹಿತವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಬೆಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆದ ಹೊಸ ಶಿಕ್ಷಣ ನೀತಿಯ ಕುರಿತಾದ ಸಂವಾದದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕವಾದ ಬದಲಾವಣೆಗೆ ನಾಂದಿ ಹಾಡಿದ್ದು, ಈ ನೀತಿ ಪ್ರೇರಿತವಾದ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳ ಜ್ಞಾನಾರ್ಜನೆ, ತರ್ಕಬದ್ಧ ಆಲೋಚನೆ ಮತ್ತು ಸಾಮಾಜಿಕವಾದ ನೈಪುಣ್ಯತೆಯನ್ನು ಪ್ರೇರೇಪಿಸುವಲ್ಲಿ ಹೊಸ ದಿಕ್ಕನ್ನು ಸೃಷ್ಟಿಸಲಿದೆ ಎಂದರು.
ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯಕ್ರಮ ಹಾಗೂ ಬೋಧನಾ ಕ್ರಮಗಳ ಕುರಿತಂತೆ ನೂತನ ಶಿಕ್ಷಣ ನೀತಿಯು ಪ್ರತಿಪಾದಿಸುವ ಅಂಶಗಳನ್ನು ಪ್ರಸ್ತಾಪಿಸಿದ ಸಚಿವರು, ಶಿಕ್ಷಣ ನೀತಿಯನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ಅವಶ್ಯಕತೆಗಳಿಗೆ ಅನುಗುಣವಾಗಿ ಅಳವಡಿಸಿಕೊಳ್ಳುವ ಪ್ರಯತ್ನಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದು, ಇಡೀ ರಾಷ್ಟ್ರದಲ್ಲಿ ಹೊಸ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವ ಮೊದಲ ರಾಜ್ಯಗಳಲ್ಲಿ ಕರ್ನಾಟಕವು ಒಂದಾಗಲಿದೆ ಎಂದರು.
ಈ ಕುರಿತಂತೆ ರಾಜ್ಯಕ್ಕೆ ಸಂಬಂಧಿಸಿದಂತೆ ಕರಡು ನೀತಿಯನ್ನು ಈಗಾಗಲೇ ರೂಪಿಸಲಾಗಿದ್ದು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಗಳು ಜಂಟಿಯಾಗಿ ಹೊಸ ನೀತಿಯ ಅನುಷ್ಠಾನಕ್ಕೆ ಮುಂದಾಗಲಿವೆ ಎಂದು ಸುರೇಶ್ ಕುಮಾರ್ ಹೇಳಿದರು.
Laxmi News 24×7