ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ಅಧೀನದಲ್ಲಿ ಬರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೋವಿಡ್ ಮತ್ತು ಒಮಿಕ್ರಾನ್ ಸೋಂಕು ಹರಡುವ ಹಿನ್ನೆಲೆಯಲ್ಲಿ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ.
ಜನವರಿ 6 ರಿಂದ ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ದೇವಸ್ಥಾನದಲ್ಲಿ ಎಲ್ಲಾ ಸೇವೆಗಳನ್ನು ರದ್ದು ಮಾಡಿ, ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ರಾಜ್ಯದಲ್ಲಿ ಇದೀಗ ಸೋಂಕು ತಗ್ಗಿದ ಹಿನ್ನೆಲೆ ನಿರ್ಬಂಧಗಳನ್ನು ರದ್ದು ಮಾಡಿ ಆದೇಶಿಸಲಾಗಿದೆ. ಹೀಗಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಮತ್ತು ಸೇವೆಗಳಿಗೆ ಅನುಮತಿ ನೀಡಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಹೊರಡಿಸಲಾದ ಆದೇಶ ಪ್ರತಿ
ಆದರೂ, ಸೇವೆಗಳ ವೇಳೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾತ್ರವಲ್ಲದೆ ಸೇವಾದಿಗಳಿಗೆ ಸಂಬಂಧಿಸಿದಂತೆ ದೇವಸ್ಥಾನದ ಆಯಾ ವಿಭಾಗಗಳ ಎಲ್ಲಾ ಸಿಬ್ಬಂದಿ ತಮ್ಮ ಕರ್ತವ್ಯವನ್ನು ಕೋವಿಡ್ ಸುರಕ್ಷತಾ ನಿಯಮಾವಳಿಗಳ ಪ್ರಕಾರ ನಿರ್ವಹಣೆ ಮಾಡುವಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.