ಬೆಂಗಳೂರು : ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಯಡಿ ಒಟ್ಟು 2367.99 ಕೋಟಿ ರೂ. ಮೊತ್ತದ 88 ಯೋಜನೆಗಳಿಗೆ ಅನುಮೋದನೆ ನೀಡಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು. ಒಟ್ಟು 88 ಯೋಜನೆಗಳಿಂದ 2367.99 ಕೋಟಿ ರೂ. ಬಂಡವಾಳ ರಾಜ್ಯದಲ್ಲಿ ಹೂಡಿಕೆಯಾಲಿದ್ದು,ಇದರಿಂದ 10904 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ನಿರೀಕ್ಷಿಸಲಾಗಿದೆ.
50 ಕೋಟಿ ರೂಪಾಯಿಗೂ ಹೆಚ್ಚು ಬಂಡವಾಳ ಹೂಡಿಕೆಯ 7 ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಸಮಿತಿ ಅನುಮೋದನೆ ನೀಡಿದ್ದು, ಒಟ್ಟು 799.1 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಅಂದಾಜು 3237 ಜನರಿಗೆ ಉದ್ಯೋಗ ಲಭಿಸಲಿವೆ.
15 ಕೋಟಿ ರೂ. ಯಿಂದ 50 ಕೋಟಿ ಒಳಗಿನ ಬಂಡವಾಳ ಹೂಡಿಕೆಯ 78 ಯೋಜನೆಗಳಿಗೆ ಅನುಮೋದಿಸಿದ್ದು, ಒಟ್ಟು 1431.74 ಕೋಟಿ ರೂ. ಹೂಡಿಕೆ ಮಾಡಲಿದೆ. ಸುಮಾರು 7667 ಉದ್ಯೋಗಗಳು ಸೃಜನೆಯಾಗಲಿವೆ.