ಚಿಕ್ಕೋಡಿ: ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ ಮಹಾರಾಜ ಇಬ್ಬರು ದೇಶದ ಆಸ್ತಿ. ಇಂತಹ ಮಹನೀಯರನ್ನು ಒಂದು ಜಾತಿಗೆ ಸೀಮಿತ ಮಾಡುವುದು ಸರಿಯಲ್ಲ. ಯಾವುದೇ ಅಪಮಾನ ಆಗದ ರೀತಿಯಲ್ಲಿ ಗೊಂದಲ ಪರಿಹರಿಸುತ್ತೇವೆ ಎಂದು ಬೆಳಗಾವಿ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.
ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾಪಿಸಿದ ವಿಚಾರವಾಗಿ ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯ ಪೀರನವಾಡಿಯಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ. ಗಲಾಟೆ ವಿಚಾರವಾಗಿ ಈಗಾಗಲೇ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಅವರ ಜೊತೆಯೂ ಮಾತನಾಡಿದ್ದೇನೆ. ಲಾಠಿ ಚಾರ್ಜ್ ಆಗಿದ್ದು ನಿಜ, ಆದರೆ ಯಾರೂ ಚಪ್ಪಲಿ ಎಸೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಅಂತ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ರಾಯಣ್ಣ ಅಭಿಮಾನಿಗಳು ರಾತ್ರೋರಾತ್ರಿ ಪೀರನವಾಡಿ ಸರ್ಕಲ್ ನಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಿದ್ದರು. ಮರಾಠಿಗರು ಸಂಗೊಳ್ಳಿ ರಾಯಣ್ಣ ಪ್ರತಿಮೆ ಎದುರು ಶಿವಾಜಿ ಪ್ರತಿಮೆ ಪ್ರತಿಷ್ಠಾಪನೆಗೆ ಯತ್ನಿಸಿದ ಘಟನೆಯೂ ನಡೆಯಿತು. ಸ್ಥಳಕ್ಕೆ ಧಾವಿಸಿ ಪೊಲೀಸರು ಶಿವಾಜಿ ಪ್ರತಿಮೆ ವಶಕ್ಕೆ ಪಡೆದುಕೊಂಡಿದ್ದಾರೆ. ಜನರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಇತ್ತ ಚನ್ನಮ್ಮ ವೃತ್ತ ಸೇರಿ ಜಿಲ್ಲಾದ್ಯಂತ ಕನ್ನಡಪರ ಸಂಘಟನೆಗಳು ಸಂಭ್ರಮಾಚರಿಸುತ್ತಿವೆ. ನಿಯಮ ಉಲ್ಲಂಘಿಸಿ ಪ್ರತಿಮೆ ಪ್ರತಿಷ್ಠಾಪನೆ ಮಾಡಿದವರ ವಿರುದ್ದ ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.