ನೀಟ್ ವ್ಯವಸ್ಥೆಯಿಂದ ಬಡ, ಮಧ್ಯಮ ವರ್ಗ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ವೈದ್ಯ ಶಿಕ್ಷಣದ ಕನಸು ನುಚ್ಚುನೂರು ಆಗುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಹಾವೇರಿ ಮೂಲದ ನವೀನ್ ಉಕ್ರೇನ್‍ನಲ್ಲಿ ಸಾವನ್ನಪ್ಪಿರುವ ಕುರಿತು ಸರಣಿ ಟ್ವೀಟ್ ಮೂಲಕ ನೀಟ್ ವಿರುದ್ಧ ಸಿಡಿದೆದ್ದಿರುವ ಮಾಜಿ ಸಿಎಂ ಕುಮಾರಸ್ವಾಮಿ ವೈದ್ಯಶಿಕ್ಷಣದ ಕನಸು ಕಾಣುವ ಬಡ, ಮಧ್ಯಮ ವರ್ಗದ ಬದುಕನ್ನು ಛಿದ್ರಗೊಳಿಸುತ್ತಿರುವ ನೀಟ್ ವಿದ್ಯಾರ್ಥಿಗಳು ಮತ್ತು ಪೆÇೀಷಕರ ಪಾಲಿಗೆ ಮರಣಶಾಸನವಾಗಿದೆ. ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಮೀಸಲಿಟ್ಟು ಉಳಿದವರಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ. ಉಕ್ರೇನ್‍ಗೆ ಮೆಡಿಕಲ್ ಓದಲು ಹೋಗಿ ರμÁ್ಯ ದಾಳಿಗೆ ತುತ್ತಾದ ವಿದ್ಯಾರ್ಥಿ ನವೀನ್ ದುರಂತ ಸಾವು ನೀಟ್ ವ್ಯವಸ್ಥೆಯ ನಿರ್ಲಜ್ಜ ಮುಖವನ್ನು ಇಡೀ ದೇಶಕ್ಕೆ ದರ್ಶನ ಮಾಡಿಸಿದೆ. ಅರ್ಹತೆ ನೆಪದಲ್ಲಿ ಪ್ರತಿಭಾವಂತ ಆರ್ಥಿಕ ದುರ್ಬಲ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾಡಲಾಗುತ್ತಿರುವ ಅನ್ಯಾಯಕ್ಕೆ ಅಂತ್ಯ ಹಾಡಬೇಕಿದೆ ಎಂದು ಕಿಡಿಕಾರಿದ್ದಾರೆ.
10ನೇ ತರಗತಿಯಲ್ಲಿ 96%, 2ನೇ ಪಿಯುಸಿಯಲ್ಲಿ 97% ಅಂಕ ಗಳಿಸಿದ್ದರೂ ನವೀನ್‍ಗೆ ಜಗತ್ತಿನ ಶಿಕ್ಷಣ ಕಾಶಿ ಭಾರತದಲ್ಲಿ ವೈದ್ಯಸೀಟು ಸಿಗಲ್ಲ. ಗ್ರಾಮೀಣ ವಿದ್ಯಾರ್ಥಿಯೊಬ್ಬ ಇಷ್ಟು ಉತ್ತಮ ಅಂಕ ಗಳಿಸುವುದು ಸುಲಭವಲ್ಲ. ಆದರೂ, ಆತನಿಗೆ ನಮ್ಮ ದೇಶದಲ್ಲಿ ವೈದ್ಯಶಿಕ್ಷಣವನ್ನು ನಿರಾಕರಿಸಲಾಗಿದೆ. ಭಾರತದಲ್ಲಿ ನಿರಾಕರಿಸಲ್ಪಟ್ಟ ಶಿಕ್ಷಣವನ್ನು ಹುಡುಕಿಕೊಂಡು ಉಕ್ರೇನ್ ಗೆ ಹೋಗಿ ಅಲ್ಲಿ ಕಲಿತು ಇನ್ನೊಬ್ಬರ ಜೀವ ಉಳಿಸಲು ನೂರುಕಾಲ ಬಾಳಿ ಬದುಕಬೇಕಿದ್ದ ನವೀನ್ ಇಂದು ಜೀವ ಕಳೆದುಕೊಂಡು ವಿಶ್ವಗುರು ಆಗಬೇಕೆಂದು ಹಾತೊರೆಯುತ್ತಿರುವ ಭಾರತದ ಆತ್ಮಸಾಕ್ಷಿಗೆ ಪ್ರಶ್ನೆಯಾಗಿದ್ದಾನೆ. ಇದಕ್ಕೆ ಯಾರು ಹೊಣೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.