ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ತಮ್ಮ ಚೊಚ್ಚಲ ಬಜೆಟ್ ಮಂಡಿಸಲಿದ್ದು, ಅವರು ತಮ್ಮ ಮೊದಲ ಬಜೆಟ್ ನಲ್ಲಿ ಹಲವು ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.
ಮಾರ್ಚ್ 4ರ ಶುಕ್ರವಾರ ಮಧ್ಯಾಹ್ನ 12.30ಕ್ಕೆ ಕರ್ನಾಟಕ ಬಜೆಟ್ 2022-23 ವಿಧಾನಮಂಡಲದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಲಿದ್ದಾರೆ.ಈ ಬಜೆಟ್ ನಲ್ಲಿ ಹಾಲಿನ ಪ್ರೋತ್ಸಾಹಧನ ಹೆಚ್ಚಳ, ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಸೇರಿದಂತೆ ಮಹತ್ವದ ಯೋಜನೆಗಳನ್ನು ಘೋಷಿಸುವ ನಿರೀಕ್ಷೆ ಇದೆ.
ಸಂಪನ್ಮೂಲಗಳ ಕ್ರೂಢೀಕರಣ, ಹೊಸ ಯೋಜನೆಗಳ ಘೋಷಣೆ ಹಾಗೂ ಅಭಿವೃದ್ಧಿಪರ ಕಾರ್ಯಕ್ರಮಗಳ ಅನುಷ್ಠಾನದ ದೊಡ್ಡ ಸವಾಲು ಬೊಮ್ಮಾಯಿ ಅವರ ಮುಂದಿದೆ.
ಕೊರೊನಾ ಲಾಕ್ ಡೌನ್, ಪ್ರವಾಹ ಸೇರಿದಂತೆ ವಿವಿಧ ಕಾರಣಗಳಿಂದ ಹೊಡೆತ ತಿಂದಿದ್ದ ಆರ್ಥಿಕತೆ ಈಗಷ್ಟೇ ಚೇತರಿಸಿಕೊಳ್ಳುತ್ತಿರುವುದು ಬೊಮ್ಮಾಯಿ ಅವರಿಗೆ ಹೊಸ ಉತ್ಸಾಹ ನೀಡಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒತ್ತು ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.