ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನದ ವಿಚಾರದಲ್ಲಿ ಸರ್ಕಾರ ಐತಿಹಾಸಿಕ ನಿರ್ಣಯವೊಂದನ್ನು ಕೈಗೊಂಡಿದ್ದು, ಕರ್ನಾಟಕದ ಲಕ್ಷಾಂತರ ನೌಕರರಿಗೆ ಸಂತೋಷವನ್ನು ಉಂಟುಮಾಡಿದೆ.
ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಂತೆ ಕೇಂದ್ರ ಸರ್ಕಾರಿ ನೌಕರರಿಗೆ ಸಮಾನಾಂತರವಾಗಿ ವೇತನ ಪರಿಷ್ಕರಿಸಲು ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಆ ನಿಟ್ಟಿನಲ್ಲಿ ಆಯೋಗವೊಂದನ್ನು ರಚಿಸುವುದಾಗಿ ತಿಳಿಸಿದ್ದಾರೆ.
ಬುಧವಾರ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತ ಮುಖ್ಯಮಂತ್ರಿಯವರು ಈ ಘೋಷಣೆಯನ್ನು ಮಾಡಿದ್ದು, ಬೊಮ್ಮಾಯಿಯವರ ಈ ನಿರ್ಧಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕಕರ ಸಂಘವು ಸಂತೋಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದೆ.
ಸಮಾನ ಕೆಲಸಕ್ಕೆ ಸಮಾನ ವೇತನ ಎಂಬುದು ನಮ್ಮ ಬಹುದಿನಗಳ ಕನಸಾಗಿತ್ತು. ಇದೀಗ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಘೋಷಣೆ ಮಾಡಿರುವುದರಿಂದ ನಮ್ಮ ಕನಸು ಬಹುತೇಕ ನನಸಾದಂತಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.