ಉಡುಪಿ: ಕಾಪು ತಾಲ್ಲೂಕಿನ ಮಲ್ಲಾರು ಫಕೀರನ ಕಟ್ಟೆಯಲ್ಲಿರುವ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್ ಹಾಗೂ ಇನ್ನೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇನ್ನೋರ್ವ ಪಾಲುದಾರ ಹಸನಬ್ಬ, ಬೆಳಪು ಗ್ರಾಪಂ ಸದಸ್ಯ ಫಹೀಮ್ ಬೆಳಪು ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಸ್ಫೋಟದ ತೀವ್ರತೆಗೆ ಇಬ್ಬರು ಮೃತಪಟ್ಟಿದ್ದಾರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಗುಜರಿ ಅಂಗಡಿಯಲ್ಲಿ ಇರಿಸಲಾದ ಹಳೆಯ ಪ್ರಿಜ್ ಸೇರಿದಂತೆ ಗುಜರಿ ಸಾಮಗ್ರಿಗಳು ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ.
ಸ್ಫೋಟಕ್ಕೆ ನಿಖರ ಕಾರಣಗಳಿಗಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಇದೇ ವೇಳೆ ನಷ್ಟದ ಮೌಲ್ಯವನ್ನು ಲೆಕ್ಕ ಹಾಕಲಾಗುತ್ತಿದೆ. ಸ್ಥಳಕ್ಕೆ ಎರಡು ಅಗ್ನಿಶಾಮಕ ದಳದ ವಾಹನಗಳೊಂದಿಗೆ ಆಗಮಿಸಿರುವ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.
Laxmi News 24×7