ಬೆಂಗಳೂರು: ‘ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ತಕ್ಷಣ ಪರಿಸರ ಅನುಮತಿ ನೀಡಬೇಕು. ರಾಜ್ಯದ ಪಾಲಿನ ನೀರು, ವ್ಯರ್ಥವಾಗಿ ತಮಿಳುನಾಡಿಗೆ ಹೋಗುತ್ತಿದೆ. ಅದನ್ನು ಬಳಸಿಕೊಳ್ಳಲು ಅವಕಾಶ ನೀಡಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೇಕೆದಾಟು ಯೋಜನೆಗೆ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಹಣ ಮೀಸಲಿಟ್ಟಿರುವುದಕ್ಕೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿದೆ. ಆ ಬೆನ್ನಲ್ಲೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ‘ಈ ಯೋಜನೆಯ ವಿಷಯದಲ್ಲಿ ತಮಿಳುನಾಡು ಮತ್ತು ಕರ್ನಾಟಕದ ನಡುವೆ ವಿವಾದವೇ ಇಲ್ಲ. ಈಗಾಗಲೇ ಈ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ಇತ್ಯರ್ಥವಾಗಿದೆ. ಕೇಂದ್ರ ಸರ್ಕಾರ ಇಚ್ಛಾಶಕ್ತಿ ಮತ್ತು ಒಕ್ಕೂಟ ಧರ್ಮದ ಪಾಲಿಸಬೇಕು’ ಎಂದು ಆಗ್ರಹಿಸಿದ್ದಾರೆ.
‘ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ 2018ರ ಫೆಬ್ರುವರಿ 16ರಂದು ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡಿದೆ. ಒಂದು ಸಾಮಾನ್ಯ ವರ್ಷದಲ್ಲಿ 177.25 ಟಿಎಂಸಿ ಅಡಿ ನೀರು ತಮಿಳುನಾಡಿಗೆ ಬಿಡುವಂತೆ ಆದೇಶ ಮಾಡಿದೆ. ಇದರ ನಿರ್ವಹಣೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಸ್ತಿತ್ವದಲ್ಲಿದೆ. ಇಷ್ಟು ಪ್ರಮಾಣದ ನೀರು ಪಡೆಯುವುದು ಮಾತ್ರ ತಮಿಳುನಾಡಿಗಿರುವ ಹಕ್ಕು. ಈ ತೀರ್ಪು ಬಂದ ಮೇಲೆ ಸುಮಾರು 400 ಟಿಎಂಸಿ ಅಡಿಗೂ ಹೆಚ್ಚು ನೀರು ಹೆಚ್ಚುವರಿಯಾಗಿ ತಮಿಳುನಾಡಿಗೆ ಹರಿದು ಹೋಗಿದೆ’ ಎಂದೂ ಅವರು ಹೇಳಿದ್ದಾರೆ.