ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ನಿಯೋಜಿಸುವ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಆಗಮಿಸಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿ ಬೆಳಗಾವಿ ಜಿಲ್ಲೆಗೆ ರಾಜ್ಯದಲ್ಲೇ ಅತ್ಯುತ್ತಮ ಹೆಸರಿದ್ದು ಈ ಬಾರಿಯೂ ಉತ್ತಮ ಪರೀಕ್ಷೆ ನಡೆಯುವಂತಾಗಲು ಎಲ್ಲರೂ ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಸೂಚನೆ ನೀಡಿದರು.
ಮಾರ್ಚ 28ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆ ಬುಧವಾರ ಬೆಳಗಾವಿಯ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೋಡಲ್ ಅಧಿಕಾರಿಗಳು ಈ ಪೂರ್ವಸಿದ್ಧತಾ ಸಭೆಗೆ ಆಗಮಿಸಿ ಜಿಲ್ಲಾಧಿಕಾರಿಗಳು ನೀಡಿದ ಅಮೂಲ್ಯ ಸಲಹೆ ಸ್ವೀಕರಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು ರಾಜ್ಯದಲ್ಲೇ ಬೆಳಗಾವಿ ಅತ್ಯಂತ ದೊಡ್ಡ ಜಿಲ್ಲೆಯಾಗಿದೆ. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಈ ಸಲವೂ ರಾಜ್ಯದಲ್ಲೇ ಮುಂಚೂಣಿ ಸ್ಥಾನ ಅಲಂಕರಿಸುವ ನಿಟ್ಟಿನಲ್ಲಿ ಸನ್ನದ್ಧವಾಗಿದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳಿಗೆ ಕಾಲಕಾಲಕ್ಕೆ ತಕ್ಕಂತೆ ಅಗತ್ಯ ಮಾರ್ಗದರ್ಶನ ನೀಡಲಾಗಿದೆ. ಈಗಾಗಲೇ ಹಲವಾರು ಪೂರಕ ಪರೀಕ್ಷೆಗಳನ್ನು ನಡೆಸಲಾಗಿದೆ. ಒಟ್ಟಾರೆಯಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳು ಈ ಬಾರಿಯೂ ಮುಂಚೂಣಿ ಸ್ಥಾನ ಗಳಿಸುವಂತಾಗಲು ಎಲ್ಲರೂ ಶಕ್ತಿಮೀರಿ ಪ್ರಯತ್ನ ಪಡಬೇಕು ಎಂದು ಸಲಹೆ ನೀಡಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿ ಈ ಸಲವೂ ಗರಿಷ್ಠ ಮುನ್ನೆಚ್ಚರಿಕಾ ಕ್ರಮಗಳನ್ನು ಇಡೀ ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿದೆ. ಯಾವುದೇ ಕಾರಣಕ್ಕೂ ಯಾವ ಅಪರಿಚಿತ ವ್ಯಕ್ತಿಯೂ ಪರೀಕ್ಷೆ ನಡೆಯುವ ಸ್ಥಳಕ್ಕೆ ಆಗಮಿಸದಂತೆ ನೋಡಿಕೊಳ್ಳಬೇಕಾಗಿದೆ ಕೊರೊನಾ ಹಿನ್ನೆಲೆಯಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸ್ ಮಾಡಬೇಕು.
ಇನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆ ವಿದ್ಯಾರ್ಥಿಗಳ ಜೀವನದಲ್ಲಿ ಬಹುಮುಖ್ಯ ಘಟ್ಟವಾಗಿದ್ದು ಈ ಹಿನ್ನೆಲೆಯಲ್ಲಿ ಅವರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸವನ್ನು ಪಾಲಕರ ಜತೆ ಅಧಿಕಾರಿಗಳು ಮಾಡಬೇಕಾಗಿದೆ. ಮಕ್ಕಳಲ್ಲಿ ಪರೀಕ್ಷೆ ಬರೆಯಲು ನಿರ್ಭಯ ವಾತಾವರಣ ನಿರ್ಮಾಣ ಮಾಡಬೇಕಿದೆ. ಈ ನಿಟ್ಟಿನಲ್ಲಿ ಪರೀಕ್ಷೆಗೆ ಸದ್ಯ ಹಲವು ದಿನ ಇದ್ದು ವಿದ್ಯಾರ್ಥಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡುವಂತೆ ಅವರು ಸೂಚನೆ ನೀಡಿದರು.