ಬೆಂಗಳೂರು : ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವವರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬರುವ ಜೂನ್ ಒಳಗಾಗಿ 8 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ ಭರವಸೆ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಕೋವಿಡ್ ಲಾಕ್ ಡೌನ್ ಅವಧಿಯಲ್ಲಿ ಹೊಸ ಪಡಿತರ ಚೀಟಿ ಕೋರಿ ಸಲ್ಲಿಸಿರುವ ಅರ್ಜಿಗಳ ಸ್ಥಳ ಪರಿಶೀಲನೆ ಕಾರ್ಯ ನಿಧಾನವಾಗಿದೆ ಮತ್ತು ಈ ಅವಧಿಯಲ್ಲಿ ಬಯೋಮೆಟ್ರಿಕ್ ಬಳಕೆಯನ್ನು ಹಿಂಪಡೆದ ಕಾರಣ ಪಡಿತರ ಚೀಟಿ ವಿತರಣೆ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಪಡಿತರ ಚೀಟಿ ನೀಡುವ ಕಾರ್ಯ ಆರಂಭವಾಗಿದೆ ಎಂದು ತಿಳಿಸಿದ್ದಾರೆ.
ಬಿಪಿಎಲ್ ಕಾರ್ಡ್ ಹೊಂದಿದ್ದ ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು ಮುಂತಾದವರನ್ನು ಪತ್ತೆ ಹಚ್ಚಿ ಸುಮಾರು 3 ಲಕ್ಷ ಪಡಿತರ ಚೀಟಿಯನ್ನು ರದ್ದು ಮಾಡಲಾಗಿದೆ ಎಂದು ತಿಳಿಸಿದ್ದಾರೆ.