ಮೈಸೂರು: ಪರಿವಾರ ಮತ್ತು ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಮುಂದಿನ ಶನಿವಾರ ಸಭೆ ನಡೆಸಿ, ಕರ್ನಾಟಕದಲ್ಲಿ ಈ ಅಧಿಸೂಚನೆ ಜಾರಿಗೊಳಿಸಲು ಕ್ರಮವಹಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವರಾದ ರಮೇಶ್ ಲ. ಜಾರಕಿಹೊಳಿ ಅವರು ತಿಳಿಸಿದರು.
ಗುರುವಾರ ಮೈಸೂರಿನ ಜಲದರ್ಶಿನಿಯಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ನಾಯಕ ಸಮಾಜದ ಮುಖಂಡರು ಹಾಗೂ ವಿವಿಧ ಗ್ರಾಮದ ಯಜಮಾನರೊಂದಿಗೆ ಸಮಾಲೋಚನೆ ನಡೆಸಿ, ಮಾತನಾಡಿದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ರೈತರು ಕೃಷಿ ಚಟುವಟಿಕೆಗಳಿಗೆ ಸರ್ಕಾರದಿಂದ ದೊರಕುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಮಹಾರಾಜರ ಕಾಲದಿಂದಲೂ ಇರುವ ಕೆರೆಗಳಿಗೆ ನೀರು ತುಂಬಿಸುವ ಮೂಲಕ ಕೃಷಿ ಚಟುವಟಿಕೆಗಳಿಗೆ ನಡೆಸಲು ಅನುಕೂಲವಾಗುವಂತೆ ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ಜನರಿಗೆ ಕುಡಿಯುವ ನೀರಿಗೆ ತೊಂದರೆ ಉಂಟಾಗದಂತೆ ಸೂಕ್ತ ವ್ಯವಸ್ಥೆ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆಯಲ್ಲಿ ಸಂಸದ ಪ್ರತಾಪ ಸಿಂಹ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಸಿದ್ದರಾಜು ಹಾಗೂ ಸಮಾಜದ ಮುಖಂಡರು ಹಾಜರಿದ್ದರು.
Laxmi News 24×7