ಬೆಂಗಳೂರು: ಪೊಲೀಸ್ ಕಲ್ಯಾಣ ನಿಧಿಗೆ 5 ಕೋಟಿ ರೂ.ಗಳನ್ನು ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಘೋಷಿಸಿದರು.
ಇಂದು ಕೋರಮಂಗಲದ ಪೊಲೀಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಗತಿಪರ ಸಮಾಜ, ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಲು ಪೊಲೀಸರ ನಿಷ್ಠೆ, ದಕ್ಷತೆಯಿಂದ ಸಾಧ್ಯವಿದೆ. ಅಪರಾಧ, ಅಪರಾಧಿಗಳೊಂದಿಗೆ ರಾಜಿಯಿಲ್ಲದೆ ಕೆಲಸ ಮಾಡಿದರೆ ಅಪರಾಧ ತನ್ನಿಂದ ತಾನೇ ಕಡಿಮೆಯಾಗುತ್ತದೆ. ರಾಜ್ಯ ಸರ್ಕಾರಕ್ಕೆ ನಿಮ್ಮ ಸೇವೆಗಳ ಬಗ್ಗೆ ಹೆಮ್ಮೆ ಇದೆ. ರಾಷ್ಟ್ರದಲ್ಲಿ ಕರ್ನಾಟಕ ಪೊಲೀಸ್ ನಂಬರ್ 1 ಸ್ಥಾನಕ್ಕೆ ಏರಲಿ ಎಂದರು.