ಅಥಣಿ: ‘ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಹಿಂದುಳಿದ ವರ್ಗ 2ಎ ಮೀಸಲಾತಿಗೆ ಆಗ್ರಹಿಸಿ ಹೋರರಾಟವನ್ನು ತೀವ್ರಗೊಳಿಸಲಾಗುವುದು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.
ಮೀಸಲಾತಿಗೆ ಆಗ್ರಹಿಸಿ ಇಲ್ಲಿ ಶನಿವಾರ ನಡೆದ ಧರಣಿ ಸತ್ಯಾಗ್ರಹ ಹಾಗೂ ಬೈಕ್ ರ‍್ಯಾಲಿಯಲ್ಲಿ ಅವರು ಮಾತನಾಡಿದರು.
‘ಬಜೆಟ್ ಅಧಿವೇಶನ ಸಂದರ್ಭದಲ್ಲಿ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು. ಆದರೆ, ಇದುವರೆಗೂ ನಮ್ಮ ಬೇಡಿಕೆ ಈಡೇರಿಲ್ಲ. ಸಮಾಜದವರೆಲ್ಲರೂ ಸೇರಿ ಕ್ರಾಂತಿ ಮಾಡುವ ಮುನ್ನ ಮೀಸಲಾತಿ ಕೊಡಬೇಕು’ ಎಂದು ಎಚ್ಚರಿಕೆ ನೀಡಿದರು.
’15 ತಿಂಗಳಿಂದ ನಿರಂತರ ಹೋರಾಟ ನಡೆಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಪ್ರತಿ ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಸತ್ಯಾಗ್ರಹ ಕೈಗೊಳ್ಳಲಾಗುವುದು. ಆಗಲೂ ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ಮುಖ್ಯಮಂತ್ರಿ ಮನೆಯ ಎದುರು ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು’ ಎಂದು ತಿಳಿಸಿದರು.
‘ಅಥಣಿ ಶಾಸಕ ಮಹೇಶ ಕುಮಠಳ್ಳಿ ನಮ್ಮ ಹೋರಾಟಕ್ಕೆ ಸಹಕಾರ ನೀಡುವುದಾಗಿ ಪತ್ರ ಕೊಟ್ಟಿದ್ದಾರೆ. ಮೀಸಲಾತಿ ನೀಡುವುದರಿಂದ ನಿಮಗೇನಾದರೂ ಸಮಸ್ಯೆ ಇದ್ದರೆ ಹೇಳಿ’ ಎಂದು ಮುಖ್ಯಮಂತ್ರಿಯನ್ನು ಕೋರಿದರು.