ಬೆಳಗಾವಿ: ‘ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಅವರು ಮೇ 11ರಂದು ಬೆಳಗಾವಿಗೆ ಭೇಟಿ ನೀಡಲಿದ್ದು, ಅಂದು ಚನ್ನಮ್ಮ ವೃತ್ತದಲ್ಲಿ ಸತ್ಕರಿಸಲಾಗುವುದು’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಆರ್.ಹರಿ ತಿಳಿಸಿದರು.
ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಪವಾರ್ ಅವರು ನಗರದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ’ ಎಂದರು.
‘ಮುಂಬರುವ ಪ್ರತಿ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ 18 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಹಾಕಲಾಗುವುದು. ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ’ ಎಂದರು.
‘ಬಿಜೆಪಿ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಅದರ ವಿರುದ್ಧ ಹೋರಾಟ ನಡೆಸಲಾಗುವುದು’ ಎಂದು ತಿಳಿಸಿದರು.
ಮುಖಂಡರಾದ ಅಮೋಲ ದೇಸಾಯಿ, ಕೆ.ಜಿ. ಪಾಟೀಲ, ನಾರಾಯಣ ಬಸರಗಿ, ದುರ್ಗೇಶ ಮೇತ್ರಿ, ಅಪ್ಪಾಸಾಹೇಬ ನಾಯಕ, ಸುರೇಂದ್ರ ಪಾಲ್ಗೊಂಡಿದ್ದರು.