ಬೆಳಗಾವಿ: ‘ಕರ್ನಾಟಕ ಪಶ್ಚಿಮ ಶಿಕ್ಷಕರ ಹಾಗೂ ವಾಯವ್ಯ ಪದವೀಧರರ ಮತ್ತು ಶಿಕ್ಷಕರ ಮತಕ್ಷೇತ್ರದಿಂದ ವಿಧಾನಪರಿಷತ್‌ಗೆ ಜೂನ್ 13ರಂದು ನಡೆಯಲಿರುವ ಚುನಾವಣೆಯಲ್ಲಿ ಅಭ್ಯರ್ಥಿಗಳ ವೆಚ್ಚಕ್ಕೆ ಮಿತಿ ನಿಗದಿಪಡಿಸಿಲ್ಲ’ ಎಂದು ಚುನಾವಣಾಧಿಕಾರಿಯೂ ಆಗಿರುವ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ತಿಳಿಸಿದರು.
ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿಗಳ ಪ್ರಕಾರ ಚುನಾವಣೆ ನಡೆಸಲಾಗುವುದು. ಮತದಾರರ ಮೇಲೆ ಪ್ರಭಾವ ಬೀರುವಂತಹ ಚಟುವಟಿಕೆಗಳು ಹಾಗೂ ಅಕ್ರಮ ವೆಚ್ಚದ ಮೇಲೆ ನಿಗಾ ವಹಿಸಲಾಗುವುದು. ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಮಾಹಿತಿ ನೀಡಿದರು.
‘ವಾಯವ್ಯ ಪದವೀಧರರ ಮತ್ತು ಶಿಕ್ಷಕರ ಮತಕ್ಷೇತ್ರಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಾಗೂ ಪಶ್ಚಿಮ ಶಿಕ್ಷಕರ ಮತಕ್ಷೇತ್ರಕ್ಕೆ ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸಹಾಯಕ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ವೇಲೆ ಐವರಿಗಷ್ಟೆ ಅವಕಾಶ ಇರುತ್ತದೆ’ ಎಂದು ಹೇಳಿದರು.
‘ಸ್ಪರ್ಧಿಸುವವರ ವಯಸ್ಸು 30 ವರ್ಷಕ್ಕಿಂತ ಕಡಿಮೆ ಇರಬಾರದು. ರಾಜ್ಯದ ಯಾವುದಾದರೂ ವಿಧಾನಸಭಾ ಕ್ಷೇತ್ರದ ಮತದಾರರಾಗಿರಬೇಕು. ಯಾವುದೇ ಕಾನೂನಿನಲ್ಲಿ ಅನರ್ಹರಾಗಿರಬಾರದು. ಕ್ಷೇತ್ರಕ್ಕೆ ಸಂಬಂಧಿಸಿದ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿದ ಶಿಕ್ಷಕರು ಮತ್ತು ಪದವೀಧರರು ಮಾತ್ರ ಅರ್ಹ ಮತದಾರರಾಗಿರುತ್ತಾರೆ’ ಎಂದು ಸ್ಪಷ್ಟಪಡಿಸಿದರು.