ಬೆಂಗಳೂರು: ರಾಜ್ಯದ ಜಿ.ಪಂ ಹಾಗೂ ತಾ.ಪಂ. ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮೇ 23ಕ್ಕೆ ಮುಂದೂಡಿದೆ.
ಜಿ.ಪಂ, ತಾ.ಪಂ ಕ್ಷೇತ್ರ ಪುನರ್‌ವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ರಾಜ್ಯ ಸರ್ಕಾರ ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚನೆ ಮಾಡಿರುವುದರಿಂದ ಚುನಾವಣೆ ನಡೆಸಲು ವಿಳಂಬವಾಗುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ಕೋರಿ ರಾಜ್ಯ ಚುನಾವಣಾ ಆಯೋಗ ಮೆಮೋ ಸಲ್ಲಿಸಿತ್ತು.
ಅದರಂತೆ, ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಹಾಗೂ ನ್ಯಾ. ಎಂ.ಜಿ. ಉಮಾ ಅವರಿದ್ದ ರಜಾ ಕಾಲದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ಅರ್ಜಿಯು ವಿಚಾರಣೆಗೆ ನಿಗದಿಯಾಗಿತ್ತು.
ಅರ್ಜಿ ವಿಚಾರಣೆಗೆ ಬಂದಾಗ, ತುರ್ತು ವಿಚಾರಣೆ ನಡೆಸುವ ಅವಶ್ಯಕತೆ ಏನಿದೆ ಎಂದು ನ್ಯಾಯಪೀಠ, ಚುನಾವಣಾ ಆಯೋಗದ ಪರ ವಕೀಲರನ್ನು ಪ್ರಶ್ನಿಸಿತು.
ಅದಕ್ಕೆ ಚುನಾವಣಾ ಆಯೋಗದ ಪರ ಹಾಜರಾದ ಹಿರಿಯ ವಕೀಲ ಕೆ.ಎನ್. ಫಣೀಂದ್ರ, ನಗರ ಸ್ಥಳೀಯ ಸಂಸ್ಥೆಗಳಿಗೆ ತ್ವರಿತವಾಗಿ ಚುನಾವಣೆ ನಡೆಸಬೇಕು ಎಂದು ಎಲ್ಲಾ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಮೇ 11ರಂದು ಆದೇಶ ನೀಡಿದೆ ಎಂದರು.