ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹೆಸರು ಬದಲಿಸುವ ವಿಷಯಕ್ಕೆ ಸಂಬಂಧಿಸಿದಂತೆ ಈ ಭಾಗದ ಅಭಿಪ್ರಾಯಕ್ಕೆ ಅನುಗುಣವಾಗಿಯೇ ನಿರ್ಧಾರ ತೆಗೆದುಕೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಅಭಿಪ್ರಾಯಕ್ಕೆ ವಿರೋಧವಾಗಿ ತೆಗೆದುಕೊಳ್ಳುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಹೇಳಿದರು.
ಜಿಲ್ಲೆಗೊಂದು ನೂತನ ವಿಶ್ವ ವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಆರು ವಿವಿ ಸ್ಥಾಪಿಸಲಾಗಿದೆ. ಇನ್ನೊಂದು ವಿವಿ ಸ್ಥಾಪಿಸಬೇಕೆಂಬ ಚರ್ಚೆಯೂ ಇದೆ. ಶಿಕ್ಷಣದಲ್ಲಿ ಗುಣಮಟ್ಟ ಇರಬೇಕು. ಆ ನಿಟ್ಟಿನಲ್ಲಿ ಹೆಜ್ಜೆಯನ್ನು ಇರಿಸಲಾಗುವುದು ಎಂದರು.
ಅತಿಥಿ ಶಿಕ್ಷಕರು ನೇಮಕ ವಿಚಾರದಲ್ಲಿ ಬಹಳಷ್ಟು ಜನರಿಗೆ ಅನ್ಯಾಯವಾಗಿದೆ ಎಂಬ ಆರೋಪ ಇದೆಯಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮೊದಲು 13500 ಜನ ಕೆಲಸ ಮಾಡುತ್ತಿದ್ದರು. ಈಗ 11500 ಜನ ಕೆಲಸ ಮಾಡುತ್ತಿದ್ದಾರೆ. ಸೇವೆ ಸಲ್ಲಿಸುತ್ತಿರುವವರಿಗೆ ಹೆಚ್ಚಿನ ಸಂಬಳ ನೀಡಲಾಗುತ್ತಿದೆ. ಅವಕಾಶ ವಂಚಿತರಿಗೆ ಬೇರೆ ಬೇರೆ ಕಡೆ ಅವಕಾಶ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು. ಪಠ್ಯ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಅವರು ವರದಿ ತರಿಸಿಕೊಳ್ಳುತ್ತಿದ್ದಾರೆ. ವರದಿ ಪರಿಶೀಲಿಸಿದ ಬಳಿಕ ಸಿಎಂ ಕ್ರಮ ಕೈಗೊಳ್ಳಲಿದ್ದಾರೆ ಎಂದರು.