ಬೆಂಗಳೂರು, ಜೂನ್ 10: ಮುಖ್ಯಮಂತ್ರಿ ಕುರ್ಚಿಯನ್ನು ಉಳಿಸಿಕೊಳ್ಳುವುದು ಹೇಗೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವ್ಯಂಗ್ಯವಾಗಿ ಸಲಹೆಯನ್ನು ನೀಡಿದ್ದಾರೆ.
ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ವಿಚಾರದಲ್ಲಿ ಸಾಲುಸಾಲು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಅಸಮರ್ಥ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ತಕ್ಷಣದಿಂದಲೇ ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿದ್ದಾರೆ.
“ಸರ್ಕಾರಿ ಆದೇಶವಿಲ್ಲದೆ ಪಠ್ಯಪುಸ್ತಕ ಪರಿಷ್ಕರಣೆಗೆ ಒಬ್ಬ ಕಿಡಿಗೇಡಿ ಟ್ರೋಲರ್ ನಿಗೆ ಅವಕಾಶ ನೀಡಿ, ಈಗ ಆತ ಮಾಡಿರುವ ಕೊಳಕುಗಳನ್ನು ತಲೆಮೇಲೆ ಹೊತ್ತುಕೊಂಡು ಸಮರ್ಥಿಸುತ್ತಿರುವ ಬೇಜವಾಬ್ದಾರಿ ಶಿಕ್ಷಣ ಸಚಿವ @BCNagesh_bjp ಅವರನ್ನು ಮುಖ್ಯಮಂತ್ರಿ @BSBommai ಅವರು ತಕ್ಷಣ ಸಂಪುಟದಿಂದ ವಜಾ ಮಾಡಬೇಕು”ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಈ ವಿಚಾರದಲ್ಲಿ ಕಾಂಗ್ರೆಸ್ಸಿನ ವಿದ್ಯಾರ್ಥಿ ಸಂಘಟನೆ NSUI ಕಾರ್ಯಕರ್ತರು ಶಿಕ್ಷಣ ಸಚಿವರ ತಿಪಟೂರು ನಿವಾಸದಲ್ಲಿ ಪ್ರತಿಭಟನೆ ನಡೆಸಿದ್ದರು. ಸಂಘಟನೆಯ ಅಧ್ಯಕ್ಷ ಕೀರ್ತಿ ಗಣೇಶ್ ಮತ್ತು ಇತರ ಪದಾಧಿಕಾರಿಗಳನ್ನು ಬಂಧಿಸಲಾಗಿತ್ತು. ಗುರುವಾರ (ಜೂನ್ 9) ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಮುಖಂಡರು ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದಾರೆ.