ವಿಧಾನ ಪರಿಷತ್ತಿನ 2 ಶಿಕ್ಷಕರ ಕ್ಷೇತ್ರ ಹಾಗೂ 2 ಪದವೀಧರರ ಕ್ಷೇತ್ರಗಳಿಗೆ ಸೋಮವಾರ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ವಾಯವ್ಯ ಪದವೀಧರ ಕ್ಷೇತ್ರ, ವಾಯವ್ಯ ಶಿಕ್ಷಕರ ಕ್ಷೇತ್ರ, ಪಶ್ಚಿಮ ಶಿಕ್ಷಕರ ಕ್ಷೇತ್ರ ಹಾಗೂ ದಕ್ಷಿಣ ಪದವೀಧರರ ಕ್ಷೇತ್ರಗಳ ಚುನಾವಣೆಗೆ ಚುನಾವಣಾ ಆಯೋಗ ಎಲ್ಲ ಸಿದ್ಧತೆ ಮಾಡಿದೆ.
ನಾಲ್ಕು ಕ್ಷೇತ್ರದಲ್ಲಿ ಒಟ್ಟು 607 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು 45 ಪುರುಷ ಹಾಗೂ 4 ಮಹಿಳೆ ಸೇರಿ 49 ಮಂದಿ ಚುನಾವಣಾ ಕಣದಲ್ಲಿದ್ದಾರೆ.
ವಿಶೇಷ ಸಾಂರ್ದಭಿಕ ರಜೆ: ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲೆ-ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು, ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಎಸ್ಟಾಬ್ಲಿಷ್ವೆುಂಟ್ಗಳಲ್ಲಿ ಕಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು – ಮತದಾನ ಮಾಡಲು ಅನುಕೂಲವಾಗುವಂತೆ ಜೂ.13 ರಂದು ವಿಶೇಷ ಸಾಂರ್ದಭಿಕ ರಜೆ ಸೌಲಭ್ಯ ನೀಡಲಾಗಿದೆ.
ಮತ ಎಣಿಕೆ ಕೇಂದ್ರಗಳು: ಜೂ.15 ರಂದು ವಾಯವ್ಯ ಪದವೀಧರ ಕ್ಷೇತ್ರ, ವಾಯವ್ಯ ಶಿಕ್ಷಕರ ಕ್ಷೇತ್ರ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಗಳ ಮತ ಎಣಿಕೆ ಬೆಳಗಾವಿಯ ಜ್ಯೋತಿ ಪಿಯು ಕಾಲೇಜಿನಲ್ಲಿ ನಡೆಯಲಿದೆ. ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರದ ಮತ ಎಣಿಕೆ ಮೈಸೂರಿನ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ಮ್ಯಾನೇಜ್ವೆುಂಟ್ ಕಾಲೇಜಿನಲ್ಲಿ ನಡೆಯಲಿದೆ.