ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ಕೇಂದ್ರದ ಬಿಜೆಪಿ ಸರ್ಕಾರವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ರಾಜಭವನ ಮುತ್ತಿಗೆಗೆ ಹೊರಟಿದ್ದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ರಾಜಭವನದತ್ತ ಮೆರವಣಿಗೆಯಲ್ಲಿ ಹೊರಟಿದ್ದ ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರನ್ನು ಇಂಡಿಯನ್ ಎಕ್ಸ್‌ಪ್ರೆಸ್ ವೃತ್ತದಲ್ಲಿ ಪೊಲೀಸರು ತಡೆದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪೊಲೀಸರ ಕ್ರಮ ಖಂಡಿಸಿ ಅಲ್ಲಿಯೇ ಧರಣಿ ಆರಂಭಿಸಿದರು.
ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಲವು ಮಂದಿ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದರು. ಪ್ರತಿಭಟನಾನಿರತ ನೂರಾರು ಕಾರ್ಯಕರ್ತರನ್ನೂ ವಶಕ್ಕೆ ಪಡೆದು ಕರೆದೊಯ್ಯುತ್ತಿದ್ದಾರೆ.