ಬೆಂಗಳೂರು : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದ ಮುಂದೆ ದಾಂಧಲೆ ನಡೆಸಿದ ಪ್ರಕರಣದ ಆರೋಪಪಟ್ಟಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಹೆಸರಿದ್ದು, ತಕ್ಷಣವೇ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂಬ ನಂಬಿಕೆಯಿಂದ ಬೆಂಗಳೂರು ದಕ್ಷಿಣ ಕ್ಷೇತ್ರದ ಜನರು ತೇಜಸ್ವಿ ಸೂರ್ಯರನ್ನು ಸಂಸದರನ್ನಾಗಿ ಮಾಡಿದ್ದಾರೆ. ಆದರೆ ಸೂರ್ಯ ದೇಶದ ಯುವಜನತೆಯನ್ನು ಗೂಂಡಾಗಿರಿಗೆ ಬಳಸಿಕೊಳ್ಳುವುದರಲ್ಲಿ ನಿರತರಾಗಿದ್ದಾರೆ. ಮಾರ್ಚ್ 30ರಂದು ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ನಡೆದ ದಾಳಿಯ ಚಾರ್ಜ್‌ಶೀಟ್‌ನಲ್ಲಿ ತೇಜಸ್ವಿ ಸೂರ್ಯ ಆರೋಪಿಯಾಗಿದ್ದಾರೆ. ಹೀಗಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಹುದ್ದೆಯ ಗೌರವ ಉಳಿಸಲಿ ಎಂದು ಹೇಳಿದ್ದಾರೆ.