Breaking News

ಚುನಾವಣಾ ವರ್ಷದಲ್ಲಿ ನೆತ್ತರಧಾರೆ ಹರಿದಷ್ಟೂ ಭರ್ಜರಿ ಮತಧಾರೆ: BJP ವಿರುದ್ಧ ಎಚ್ ಡಿಕೆ ಕಿಡಿ

Spread the love

ಬೆಂಗಳೂರು: ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ಬಿಜೆಪಿ ಸರಕಾರ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಎನ್‌ಐಎ ತನಿಖೆಗೆ ಒಪ್ಪಿಸಿದೆ. ಆದರೆ, ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ ಎನ್‌ಐಎ ತನಿಖೆಗೆ ವಹಿಸಲು ಯಾಕೆ ಹಿಂಜರಿಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

 

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕರಾವಳಿ ಭಾಗದಲ್ಲಿ ಪ್ರತಿ ಕೊಲೆ ಬಗ್ಗೆಯೂ ಸರಕಾರಕ್ಕೆ ಮಾಹಿತಿ ಇದೆ. ಆ ಕೊಲೆಗಳು ಏಕಾಗುತ್ತಿವೆ ಎನ್ನುವುದೂ ಗೊತ್ತಿದೆ. ಆದರೆ, ʼಡಬಲ್ ಎಂಜಿನ್ ಸರಕಾರ ಡಬಲ್ ಗೇಮ್ʼ ಆಡುತ್ತಿದೆ. ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ ಎಂದು ಬೀಗುವ ಬಿಜೆಪಿ ಪಕ್ಷ, ತನಗೆ ಅಧಿಕಾರ ತಂದುಕೊಟ್ಟ ಯುವಕರ ಜೀವಗಳಿಗೇ ಗ್ಯಾರಂಟಿ ಕೊಡದಷ್ಟು ದುರ್ಬಲವಾಗಿದೆ! ಪ್ರವೀಣ್ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ಒಪ್ಪಿಸಿ ವೀರಾವೇಶ ಮೆರೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಂಗಳೂರಿನಲ್ಲಿ ಜನರಿಗೆ ಕೊಟ್ಟ ಸಂದೇಶವೇನು? ಅವರ ನಾಲಿಗೆಯ ಮೇಲೆ ಒಮ್ಮೆಯಾದರೂ “ಶಾಂತಿ ಕಾಪಾಡಿ” ಎನ್ನುವ ಮಾತು ಬಂತಾ? ಬರಲಿಲ್ಲ! ನೆಮ್ಮದಿಗಾಗಿ ಕಿಂಚಿತ್ ಕ್ರಮ ವಹಿಸಿದಿರಾ? ಅದೂ ಇಲ್ಲ. ಹಿಂಸೆಗೆ ಇನ್ನಷ್ಟು ತುಪ್ಪಾ ಸುರಿದು ಬಂದರು ಎಂದು ಕಿಡಿಕಾರಿದ್ದಾರೆ.

ಎನ್‌ಐಎ ತನಿಖೆಗೆ ವಹಿಸಿದ ಎಷ್ಟು ಪ್ರಕರಣಗಳಿಗೆ ತಾರ್ಕಿಕ ಅಂತ್ಯ ಸಿಕ್ಕಿದೆ? ಒಂದೂ ಇಲ್ಲ. ಎನ್‌ಐಎ ಗೆ ಒಪ್ಪಿಸಿದ ಮೇಲೆ ತನಿಖೆಯಲ್ಲಿ ಮುಂದೆ ಸಾಗುತ್ತಿದ್ದ ರಾಜ್ಯ ಪೊಲೀಸರಿಗೆ ಮುಖ್ಯಮಂತ್ರಿಗಳು ಕೊಟ್ಟ ಸಂದೇಶವೇನು? ಸ್ವತಃ ಗೃಹ ಸಚಿವರಾಗಿದ್ದ ಅವರು, ಸಿಎಂ ಆದ ಮೇಲೆ ತಮ್ಮ ಅಧೀನದ ಪೊಲೀಸ್ ವ್ಯವಸ್ಥೆಯನ್ನೇ ನಂಬುತ್ತಿಲ್ಲ. ಇದು ವಿಪರ್ಯಾಸ. ರಾಜ್ಯದಲ್ಲಿ ದಕ್ಷ ಪೊಲೀಸ್ ಅಧಿಕಾರಿಗಳು ಇಲ್ಲವೆ? ನಿಷ್ಠಾವಂತ, ಪ್ರಾಮಾಣಿಕ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟರೆ ಕರಾವಳಿ ಹಿಂಸಾಕಾಂಡವನ್ನು ಮೂಲೋತ್ಪಾಟನೆ ಮಾಡಬಲ್ಲರು. ಬಿಜೆಪಿ ಸರಕಾರಕ್ಕೆ ಅದು ಬೇಕಿಲ್ಲ. ಸಮರ್ಥ ಅಧಿಕಾರಿಗಳನ್ನು ನಂಬದೆ ಎನ್ ಐಎಗೆ ವಹಿಸುವ ನಾಟಕವಾಡಿ ಕಗ್ಗೊಲೆಗಳ ತನಿಖೆಗೆ ʼಸಮಾಧಿʼ ಕಟ್ಟಲು ಹೊರಟಿದೆ ಎಂದು ಟೀಕಿಸಿದ್ದಾರೆ.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ