ಬೆಂಗಳೂರು : ಈ ಬಾರಿಯ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆಯ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದಿನ ದಿನ ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ, ದೇವಾಲಯಗಳಿಗೆ ಆಗಮಿಸುವಂತಹ ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡಬೇಕು ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅ ಜೊಲ್ಲೆ ( Minister Shashikala Jolle ) ಅವರ ನಿರ್ದೇಶನದ ಮೇರೆಗೆ ಸುತ್ತೋಲೆಯನ್ನು ಹೊರಡಿಸಲಾಗಿದೆ.
ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಬಹಳ ಮಹತ್ವಪೂರ್ಣವಾದ ಸ್ಥಾನವನ್ನು ನೀಡಿ ಗೌರವಿಸಲಾಗುತ್ತದೆ. ಪ್ರತಿ ವರ್ಷ ಶ್ರೀ ವರಮಹಾಲಕ್ಷ್ಮಿ ವ್ರತ, ಸ್ವರ್ಣಗೌರಿ ವ್ರತ ಮತ್ತು ನವರಾತ್ರಿಗಳಲ್ಲೀಯೂ ಸಹ ಸ್ತ್ರೀ ದೇವತೆಯನ್ನು ಪೂಜಿಸಿ ಆರಾಧಿಸಲಾಗುತ್ತದೆ. ಶ್ರೀ ವರಮಹಾಲಕ್ಷ್ಮಿ ವ್ರತದ ದಿನದಂದು ಮಹಿಳೆಯರು ಮನೆಯಲ್ಲಿ ಪೂಜೆಯನ್ನು ನೆರವೇರಿಸಿ ದೇವಾಲಯಗಳಿಗೆ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸುವ ಸಂಪ್ರದಾಯವಿದೆ.