ತುಮಕೂರು: ಶಿರಾ ತಾಲೂಕಿನ ಬಾಲೆನಹಳ್ಳಿ ಗೇಟ್ ಬಳಿ ಇಂದು ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಪ್ರಧಾನಿ ಮೋದಿ ಪರಿಹಾರ ಘೋಷಣೆ: ‘ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ. ಅಪಘಾತದಲ್ಲಿ ಜೀವ ಕಳೆದುಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ. ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು’ ಎಂದು ತುಮಕೂರು ಅಪಘಾತದ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ತುಮಕೂರು ಬಳಿ ಭೀಕರ ಅಪಘಾತ: ರಾಯಚೂರಿನಿಂದ ಬೆಂಗಳೂರಿಗೆ ದುಡಿಯಲು ತೆರಳುತ್ತಿದ್ದ ವೇಳೆ ಕ್ರೂಸರ್ ವಾಹನ ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ 9 ಜನ ಸಾವನ್ನಪ್ಪಿದ್ದಾರೆ, 12 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಲವರನ್ನು ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದವರನ್ನು ಬೆಂಗಳೂರಿಗೆ ರವಾನಿಸಲಾಗಿದೆ.