ದಿನನಿತ್ಯ ಹಸಿ ಕಸ, ಒಣ ಕಸ, ಇ-ಕಸ, ಹಾನಿಕಾರಕ ಕಸ ಸೇರಿದಂತೆ ಹಲವಾರು ರೀತಿಯ ಕಸವನ್ನು ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸುತ್ತಿದ್ದೇವೆ. ಪ್ರಸ್ತುತ ಕಸ ವಿಲೇವಾರಿ ಒಂದು ಸವಾಲಿನ ಕೆಲಸವಾಗಿದೆ.
ಇದನ್ನು ಸಮರ್ಪಕವಾಗಿ ನಿರ್ವಹಿಸವ ನಿಟ್ಟಿನಲ್ಲಿ ಎಲ್ಲ ಬಗೆಯ ಕಸಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಕೆಲಸಕ್ಕೆ ಎಲ್ಲ ಅಧಿಕಾರಿಗಳು ಕೈಜೋಡಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ರಾಜ್ಯಮಟ್ಟದ ಸಮಿತಿ ಅಧ್ಯಕ್ಷರಾದ ಸುಭಾಷ್ ಆಡಿ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ (ಸೆ.1) ನಡೆದ ಘನತ್ಯಾಜ್ಯ ನಿರ್ವಹಣೆ ಕುರಿತು ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಂಗಳೂರು ನಗರದ ನಂತರ ಬೆಳಗಾವಿ ಕೂಡ ಒಂದು ದೊಡ್ಡ ಜಿಲ್ಲೆಯಾಗಿದೆ. ಘನತ್ಯಾಜ್ಯ ವಿಲೇವಾರಿಗೆ ಎಲ್ಲ ಇಲಾಖೆಯ ಅಧಿಕಾರಿಗಳು ಜಿಲ್ಲಾಡಳಿತದ ಸಹಯೋಗದೊಂದಿಗೆ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.ಸ್ಮಾರ್ಟ್ ಸಿಟಿ ಅಡಿಯಲ್ಲಿ ನಗರದಲ್ಲಿ ಈಗಾಗಲೇ ಎಲ್ಲ ರಸ್ತೆ ಹಾಗೂ ಇನ್ನಿತರ ಕಾಮಗಾರಿಗಳು ಮುಕ್ತಾಯಗೊಂಡಿವೆ. ಸ್ವಚ್ಛತೆ ಕಾಪಾಡುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಸಾರ್ವಜನಿಕ ಶೌಚಾಲಯ ಸೇರಿದಂತೆ ನಗರದ ಎಲ್ಲ ಭಾಗದಲ್ಲಿ ಸ್ವಚ್ಛತೆ ಕಾಪಾಡಲು ಸಂಭಂದಿಸಿದ ಅಧಿಕಾರಿಗಳು ನಿರಂತರ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.