Breaking News

ಹಿಂದಿ ಹೇರಿಕೆಗೆ ಉತ್ತರ: ಕರ್ನಾಟಕದ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯ!

Spread the love

ಬೆಂಗಳೂರು, ಸೆಪ್ಟೆಂಬರ್ 6: ಕರ್ನಾಟಕದಲ್ಲಿ ನಡೆಯುವ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡವೇ ಕಡ್ಡಾಯ ಭಾಷೆ ಆಗಿರಬೇಕು ಎಂದು ರಾಜ್ಯ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ.

ಕನ್ನಡವನ್ನು ಕರ್ನಾಟಕದಲ್ಲಿ ಆಡಳಿತ ಭಾಷೆಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಹಾಗೂ ಕನ್ನಡಿಗರ ಹಿತಾಸಕ್ತಿಯನ್ನು ಕಾನೂನಿನ ಅನ್ವಯ ಸಂರಕ್ಷಿಸುವ ಸಲುವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

 

 

ಕರ್ನಾಟಕದ ಆಡಳಿತ ಭಾಷೆಯಾಗಿ ಕನ್ನಡವೇ ಇರಬೇಕು ಎಂದು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ 1953ರಲ್ಲಿ ನಿರ್ದಿಷ್ಟಪಡಿಸಲಾಗಿದೆ. ರಾಜ್ಯದಲ್ಲಿ ಕನ್ನಡ ಭಾಷೆಯು ಕೇವಲ ಆಡಳಿತ ಭಾಷೆ ಆಗಿರದೇ ಸಾರ್ವಭೌಮ ಭಾಷೆ ಆಗಿರುತ್ತದೆ.

ಕರ್ನಾಟಕದ ಕಾರ್ಯಕ್ರಮಗಳಲ್ಲೇ ಕನ್ನಡ ಅಗೋಚರ
 ಕೇಂದ್ರ ಸರ್ಕಾರದ ಮತ್ತು ರಾಜ್ಯ ಸರ್ಕಾರದ ಕೆಲವು ಕಾರ್ಯಕ್ರಮಗಳಲ್ಲಿ ಕನ್ನಡದ ಹೊರತಾಗಿ ಬೇರೆ ಭಾಷೆಯನ್ನು ಹೆಚ್ಚಾಗಿ ಬಳಸುತ್ತಿರುವುದು ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹೀಗೆ ಕೇಂದ್ರದ ನಾಯಕರು ಪಾಲ್ಗೊಳ್ಳುವ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯ ನಾಮಫಲಕಗಳೇ ಕಾಣುವುದಿಲ್ಲ. ಇದು ರಾಜ್ಯದಲ್ಲಿ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಕರ್ನಾಟಕದಲ್ಲೇ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಬಳಸದಿರುವುದಕ್ಕೆ ಆಕ್ರೋಶ ವ್ಯಕ್ತವಾಗಿತ್ತು.

ಕನ್ನಡ ಕಡ್ಡಾಯಗೊಳಿಸುವಂತೆ ಪತ್ರದಲ್ಲಿ ಮನವಿ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಇತ್ತೀಚಿಗೆ ಬರೆದಿರುವ ಪತ್ರದಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಲಾಗಿತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯನ್ನು ಬಳಸದಿರುವ ಬಗ್ಗೆ ಪ್ರಸ್ತಾಪಿಸಿದ್ದರು. ಈ ಬಗ್ಗೆ ವೇದಿಕೆ ಮೇಲೆ ಅಳವಡಿಸಲಾಗುವ ಪರದೆಗಳಲ್ಲಿ ಮತ್ತು ಫಲಕಗಳಲ್ಲಿ ಹಾಗೂ ಒಟ್ಟಾರೆ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಕೋರಿದ್ದರು.

ಕನ್ನಡವು ಆದ್ಯತೆಯೇ ಹೊರತೂ ಆಯ್ಕೆಯಲ್ಲ

ಕನ್ನಡ ಭಾಷೆಯು ನಮಗೆ ಆದ್ಯತೆ ಆಗಬೇಕೇ ಹೊರತೂ ಆಯ್ಕೆ ಆಗಿರಬಾರದು. ಈ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪ್ರಸ್ತಾವನೆಯ ಅನ್ವಯ ಇನ್ನು ಮುಂದೆ ರಾಜ್ಯದಲ್ಲಿ ಜರುಗುವ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳ ಆಯೋಜನೆಯಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸತಕ್ಕದ್ದು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಹಿಂದಿನಿಂದಲೂ ಹಿಂದಿ ಹೇರಿಕೆ ಕುರಿತು ವಿರೋಧ

ಕರ್ನಾಟಕದಲ್ಲಿ ಹಿಂದಿ ಹೇರಿಕೆಯ ಬಗ್ಗೆ ಮೊದಲಿನಿಂದಲೂ ಆಕ್ಷೇಪ ವ್ಯಕ್ತವಾಗುತ್ತಲೇ ಇದೆ. ರಾಜ್ಯದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಕನ್ನಡದ ಬದಲಿಗೆ ಹೆಚ್ಚಾಗಿ ಹಿಂದಿಯನ್ನು ಬಳಸುತ್ತಿರುವುದು ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಕೇಂದ್ರದ ನಾಯಕರನ್ನು ಮೆಚ್ಚಿಸುವುದಕ್ಕಾಗಿ ಹಿಂದಿ ಹೇರಿಕೆಯ ಬಗ್ಗೆ ರಾಜ್ಯದ ನಾಯಕರು ಮೌನಕ್ಕೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿತ್ತು. ಈಗ ಎಲ್ಲ ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ಸುತ್ತೋಲೆಯು ಉತ್ತರ ಕೊಟ್ಟಿದ್ದು, ಕರುನಾಡಿನಲ್ಲಿ ಕನ್ನಡವೇ ಸಾರ್ವಭೌಮ ಎಂಬುದನ್ನು ಸಾರಿ ಹೇಳಲಾಗಿದೆ.


Spread the love

About Laxminews 24x7

Check Also

ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ

Spread the love ರಾಮನಗರ: ಎಚ್‌.ಡಿ. ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದ್ದೇ ನಾನು. ಇದೀಗ ನಾನು 2 ಬಾರಿ ಮುಖ್ಯಮಂತ್ರಿಯಾದೆ ಎಂದು ಅವರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ