ಬೆಂಗಳೂರು: ರಾಜ್ಯದ 31 ಜಿಲ್ಲಾ ಪಂಚಾಯಿತಿ ಹಾಗೂ 239 ತಾಲ್ಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲ ರೀತಿಯ ಮೀಸಲಾತಿಯನ್ನು 12 ವಾರದೊಳಗೆ ಮರು ನಿಗದಿಪಡಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಕರ್ನಾಟಕ ಪಂಚಾಯತ್ ರಾಜ್ ಹಾಗೂ ಗ್ರಾಮ ಸ್ವರಾಜ್ (ತಿದ್ದುಪಡಿ) ಕಾಯ್ದೆ- 2021ರ ಜಾರಿಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿದ್ದ ಗೆಜೆಟ್ ಅಧಿಸೂಚನೆ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಹಾಗೂ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ನೇತೃತ್ವದ ವಿಭಾಗೀಯ ನ್ಯಾಯಪೀಠವು, ಸರ್ಕಾರ ಕೇಳಿದ್ದ ಆರು ತಿಂಗಳ ಸಮಯಾವಕಾಶದ ಬದಲಿಗೆ 12 ವಾರಗಳ ಗಡುವು ನೀಡಿ ವಿಚಾರಣೆ ಮುಂದೂಡಿದೆ.
ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್‌ವಿಂಗಡಣೆ (ಗಡಿ ನಿರ್ಣಯ) ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ಹಿಂಪಡೆದಿದ್ದ ಸರ್ಕಾರ, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಕಾಯ್ದೆಗೆ ತಿದ್ದುಪಡಿ ತಂದಿದೆ. ಅದನ್ನು ರಾಜ್ಯ ಚುನಾವಣಾ ಆಯೋಗ ಈಗಾಗಲೇ ಬಲವಾಗಿ ಆಕ್ಷೇಪಿಸಿದೆ.