ನವದೆಹಲಿ: ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿ ಕರ್ನಾಟಕ ಚುನಾವಣಾ ಆಯೋಗ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಇಂತಹ ಸಂದರ್ಭದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಅರ್ಜಿದಾರರು ಅಗತ್ಯವಿದ್ದರೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು’ ಎಂದು ಸೂಚಿಸಿತು.
ಕಳೆದ ವರ್ಷ ಏಪ್ರಿಲ್, ಮೇ ಮತ್ತು ಜೂನ್‌ನಲ್ಲಿ ಅವಧಿ ಪೂರ್ಣಗೊಂಡ ಕರ್ನಾಟಕದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಸಿದ್ದತೆ ಆರಂಭಿಸಿದ್ದ ಚುನಾವಣಾ ಆಯೋಗವು ಈ ಸಂಬಂಧ ಕ್ಷೇತ್ರ ಪುನರ್‌ವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿತ್ತು. ಅಂತೆಯೇ ಮೀಸಲಾತಿ ಕರಡನ್ನು ಪ್ರಕಟಿಸಲಾಗಿತ್ತು.
ದಿನಾಂಕ ಘೋಷಣೆ ಮಾಡಬೇಕು ಎನ್ನುವ ಸಂದರ್ಭದಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರ ವನ್ನು ಚುನಾವಣಾ ಆಯೋಗದಿಂದ ಹಿಂಪಡೆದ ಸರ್ಕಾರ ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿತ್ತು.
ಇದನ್ನು ಪ್ರಶ್ನಿಸಿ ಆಯೋಗವು ಹೈಕೋರ್ಟ್ ಮೆಟ್ಟಿಲೇರಿತ್ತು.
ಈ ವರ್ಷದ ಮೇ ತಿಂಗಳಲ್ಲಿ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್, ಕ್ಷೇತ್ರ ಪುನರ್ವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ಹೈಕೋರ್ಟ್ 12 ವಾರಗಳ ಗಡುವು ವಿಧಿಸಿತ್ತು. 12 ವಾರಗಳ ನಂತರ ಒಂದು ವಾರದಲ್ಲಿ ರಾಜ್ಯ ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆ ಆರಂಭಿಸಬೇಕು ಎಂದು ಆದೇಶಿಸಿತ್ತು.
ಈ ಪ್ರಕ್ರಿಯೆ ಪೂರ್ಣಗೊಳಿಸಲು ಮತ್ತಷ್ಟು ಕಾಲಾವಕಾಶ ನೀಡಬೇಕು ಎಂದು ಸೀಮಾ ನಿರ್ಣಯ ಆಯೋಗವು ಸರ್ಕಾರಕ್ಕೆ ಸೆಪ್ಟೆಂಬರ್‌ನಲ್ಲಿ ಮನವಿ ಮಾಡಿತ್ತು. ಈ ಸಂಬಂಧ ಹೈಕೋರ್ಟ್‌ಗೆ ಸರ್ಕಾರ ಪ್ರಮಾಣಪತ್ರ ಸಲ್ಲಿಸಿತ್ತು. ಹೈಕೋರ್ಟ್ ಮತ್ತೆ 12 ವಾರಗಳ ಕಾಲಾವಕಾಶ ನೀಡಿತ್ತು.
ಆಯೋಗ ಸಿದ್ಧಪಡಿಸಿರುವ ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲಾತಿ ಪ್ರಕಾರವೇ ಚುನಾವಣೆ ನಡೆಸಲು ಅವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು.