ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.
ಕುಮಾರಸ್ವಾಮಿ ಹೇಳಿದರು.
ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಮನೆಗೆ ಸೋಮವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿಯು ಜೆಡಿಎಸ್‌ಗೆ ಬೆಂಬಲ ನೀಡಲಿದೆ ಎಂದು ಕೆಲವೆಡೆ ವರದಿಯಾಗಿದೆ. ಬಿಜೆಪಿ ಜತೆ ಮೈತ್ರಿ ಕುರಿತು ಯಾವುದೇ ಚರ್ಚೆ ಆಗಿಲ್ಲ, ಮುಂದೆಯೂ ಆಗುವುದಿಲ್ಲ. ಆ ಪಕ್ಷದ ಜತೆ ಮೈತ್ರಿಯ ಪ್ರಶ್ನೆಯೇ ಇಲ್ಲ’ ಎಂದರು.
‘ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸಲಿ ಅಥವಾ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಲಿ. ನಾವು ಬಿಜೆಪಿ ಜತೆ ಸೇರಿ ಅವರ ವಿರುದ್ಧ ಕುತಂತ್ರ ಮಾಡಬೇಕಿಲ್ಲ. ಬಿಜೆಪಿಯವರ ರೀತಿ ನಾನು ಸಣ್ಣ ಮಟ್ಟದಲ್ಲಿ ಮಾತನಾಡುವುದಿಲ್ಲ. ನಮ್ಮ ಪಕ್ಷದ ಅಭ್ಯರ್ಥಿ ಯಾರು ಎಂಬುದು ನಿರ್ಣಯ ಆಗಿದೆ. ಕೋಲಾರದಲ್ಲಿ ನಮಗೆ ಸಮಸ್ಯೆಯೇ ಇಲ್ಲ. ಸೋಲಿಸುವುದು, ಗೆಲ್ಲಿಸುವುದು ನಮ್ಮ ಕೈಯಲ್ಲಿ ಇರುವುದಿಲ್ಲ’ ಎಂದು ಹೇಳಿದರು.
‘ಎಲ್ಲಿ ಏನು ಕೆಲಸ ಮಾಡಬೇಕೋ ಅದನ್ನು ಮಾಡುತ್ತೇವೆ. ವೀರಾವೇಶದ ಮಾತನಾಡುವುದರಿಂದ ಪ್ರಯೋಜನ ಇಲ್ಲ. ಸಿದ್ದರಾಮಯ್ಯ ಅವರನ್ನು ನಾವು ಸೋಲಿಸಬೇಕಿಲ್ಲ. ಅವರ ಪಕ್ಷದವರೇ ಸೋಲಿಸುತ್ತಾರೆ’ ಎಂದರು