Breaking News

ಬೆಳಗಾವಿ ಗಡಿ ವಿಚಾರದಲ್ಲಿ ಮತ್ತೆ ಮತ್ತೆ ಕಾಲು ಕೆರೆದುಕೊಂಡು ಜಗಳಕ್ಕೆ ಬರುವ ಮಹಾರಾಷ್ಟ್ರ ಸರ್ಕಾರ

Spread the love

ಮುಂಬೈ: ಬೆಳಗಾವಿ ಗಡಿ ವಿಚಾರದಲ್ಲಿ ಮತ್ತೆ ಮತ್ತೆ ಕಾಲು ಕೆರೆದುಕೊಂಡು ಜಗಳಕ್ಕೆ ಬರುವ ಮಹಾರಾಷ್ಟ್ರ ಸರ್ಕಾರ ಈಗ ಒಂದು ಹೆಜ್ಜೆ ಮುಂದೆ ಹೋಗಿ, ಈ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಅಂಗಳಕ್ಕೆ ಕರೆದೊಯ್ಯಲು ಮುಂದಾಗಿದೆ.

 

ಬುಧವಾರ ಸುಪ್ರೀಂಕೋರ್ಟ್‌ನಲ್ಲಿ ಮಹಾರಾಷ್ಟ್ರ ಸಲ್ಲಿಕೆ ಮಾಡಿರುವ ಬೆಳಗಾವಿ ಗಡಿ ವಿವಾದ ಸಂಬಂಧದ ಅರ್ಜಿ ವಿಚಾರಣೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯಮಂತ್ರಿ ಏಕ್‌ನಾಥ್‌ ಶಿಂಧೆ ಮತ್ತು ಡಿಸಿಎಂ ದೇವೇಂದ್ರ ಫ‌ಡ್ನವೀಸ್‌ ನೇತೃತ್ವದಲ್ಲಿ ಆಡಳಿತ ಮತ್ತು ಪ್ರತಿಪಕ್ಷ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಈ ವೇಳೆ ಸಮರ್ಥವಾಗಿ ವಿಚಾರಣೆ ಮಂಡಿಸಲು ಹಿರಿಯ ವಕೀಲ ವೈದ್ಯನಾಥನ್‌ ಅವರ ನೇಮಕ ಮತ್ತು ಕಾನೂನು ಸಮನ್ವಯಕ್ಕಾಗಿ ಸಚಿವರಾದ ಚಂದ್ರಕಾಂತ್‌ ಪಾಟೀಲ್‌ ಮತ್ತು ಶಂಭುರಾಜ್‌ ದೇಸಾಯಿ ಅವರನ್ನು ನೇಮಕ ಮಾಡಲು ನಿರ್ಧಾರ ಮಾಡಲಾಗಿದೆ.

ಪ್ರಧಾನಿ ಭೇಟಿ:

ಸಭೆ ಬಳಿಕ ಮಾತನಾಡಿದ ಡಿಸಿಎಂ ದೇವೇಂದ್ರ ಫ‌ಡ್ನವೀಸ್‌, ಸದ್ಯದಲ್ಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಗಡಿ ವಿವಾದ ಬಗೆಹರಿಸಲು ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ. ಅಲ್ಲದೇ, ಗಡಿ ವಿವಾದವು ಅತ್ಯಂತ ಸೂಕ್ಷ್ಮವಿಚಾರವಾಗಿದ್ದು, ಮಹಾರಾಷ್ಟ್ರದ ಎಲ್ಲ ರಾಜಕೀಯ ಪಕ್ಷಗಳೂ ಈ ವಿಚಾರದಲ್ಲಿ ಒಗ್ಗಟ್ಟಾಗಿವೆ. ಸೂಕ್ತ ಹಾಗೂ ಪ್ರಜಾಸತ್ತಾತ್ಮಕವಾಗಿ ಈ ವಿವಾದಕ್ಕೆ ಪರಿಹಾರ ಕಂಡುಕೊಳ್ಳಲು ನಾವು ಬದ್ಧರಾಗಿದ್ದೇವೆ ಎಂದೂ ತಿಳಿಸಿದ್ದಾರೆ.

ಜತೆಗೆ, ಗಡಿ ವಿಚಾರದ ಬಗ್ಗೆ ನೋಡಿಕೊಳ್ಳುವ ವಿಶೇಷ ಘಟಕವನ್ನು ಮತ್ತಷ್ಟು ಬಲಿಷ್ಠಪಡಿಸಿ, ರಾಜ್ಯ ಸರ್ಕಾರದ ಎಲ್ಲ ಯೋಜನೆಗಳೂ ಗಡಿಯಲ್ಲಿರುವ ಜನರಿಗೆ ತಲುಪುವಂತೆ ಮಾಡಬೇಕು ಎಂದು ಸೂಚಿಸಿದ್ದಾರೆ. ನಮ್ಮ ಸರ್ಕಾರವು ಗಡಿ ಭಾಗದ ಜನರೊಂದಿಗಿದೆ ಎಂದೂ ತಿಳಿಸಿದ್ದಾರೆ.

ಶಿವಸೇನೆ ಮುಖ್ಯಸ್ಥ ಬಾಳಾಸಾಹೇಬ್‌ ಠಾಕ್ರೆ ಅವರು ಸದಾ ಗಡಿ ಪ್ರದೇಶಗಳಲ್ಲಿ ವಾಸಿಸುವ ಜನರೊಂದಿಗಿದ್ದರು. ಗಡಿ ಸಮಸ್ಯೆ ಪರಿಹಾರವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿಯೇ ವೈದ್ಯನಾಥನ್‌ರನ್ನು ನೇಮಕ ಮಾಡಲಾಗಿದೆ. ಅಗತ್ಯಬಿದ್ದರೆ, ಕಾನೂನು ತಜ್ಞರ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದೂ ಸಿಎಂ ಶಿಂಧೆ ಹೇಳಿದ್ದಾರೆ.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ