ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ಕಾಲ ದೆಹಲಿಗೆ ತೆರಳುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಈಗ ಮತ್ತೆ ಚಟುವಟಿಕೆಗಳು ಗರಿಗೆದರಲಾರಂಭಿಸಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಮತ್ತಿತರ ನಾಯಕರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಆದರೆ ವರಿಷ್ಢರ ಭೇಟಿಗೆ ಇನ್ನೂ ಸಮಯಾವಕಾಶ ನಿಗದಿಯಾಗದೆ ಇರುವುದು ಕುತೂಹಲ ಸೃಷ್ಟಿಸಿದೆ.
ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಉಂಟಾಗಿರುವ ಗಡಿ ವಿವಾದ ಕುರಿತು ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರನ್ನು ಭೇಟಿ ಮಾಡಲಿದ್ದಾರೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಅವರು ಸಂಪುಟ ವಿಸ್ತರಣೆಯ ವಿಚಾರವನ್ನು ಪ್ರಸ್ತಾಪಿಸಿದ್ದು, ಆಗಲಿ, ತ್ವರಿತವಾಗಿ ಮಾಡಿ, ಅದಕ್ಕೂ ಮುನ್ನ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಮಾತನಾಡಿ ಎಂದು ಹೇಳಿದ್ದಾಗಿ ಮೂಲಗಳು ತಿಳಿಸಿವೆ.
ಬೊಮ್ಮಾಯಿ ಸಂಪುಟದಲ್ಲಿ ಈಗ ಒಟ್ಟು ಆರು ಸಚಿವ ಸ್ಥಾನಗಳು ಖಾಲಿ ಇದ್ದು, ವಿಸ್ತರಣೆಗೆ ಹಸಿರು ನಿಶಾನೆ ಸಿಕ್ಕಿದರೆ ಯಾವುದೇ ಸಂದರ್ಭದಲ್ಲಿ ಪ್ರಮಾಣ ವಚನ ಸ್ವೀಕಾರ ನಡೆಯಬಹುದು ಎನ್ನಲಾಗುತ್ತಿದೆ.