ಮೂಡಲಗಿ: 2023ರ ಚುನಾವಣೆಯಲ್ಲಿ ನಾನು ಮತ್ತು ಸಹೋದರ ರಮೇಶ ಜಾರಕಿಹೊಳಿಯವರು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತೇವೆ ಎಂದು ಹೇಳುವ ಮೂಲಕ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇತರೆ ಪಕ್ಷಗಳ ಸೇರ್ಪಡೆ ಕುರಿತ ಊಹಾಪೋಹಗಳಿಗೆ ತೆರೆ ಎಳೆದರು.
ತಾಲೂಕಿನ ರಾಜಾಪುರ ಗ್ರಾಮದಲ್ಲಿ ಗುರುವಾರ ಅರಭಾವಿ ಮತ್ತು ಗೋಕಾಕ ಮತಕ್ಷೇತ್ರಗಳ ಹಾಲುಮತ ಕುರುಬ ಸಮಾಜ ಬಾಂಧವರು ಹಮ್ಮಿಕೊಂಡಿದ್ದ ಕನಕದಾಸರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾನು ಮತ್ತು ಸಹೋದರ ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಬೇರೆ ಪಕ್ಷ ಸೇರುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಬಿಜೆಪಿ ಬಿಡುತ್ತಾರೆಂದು ಅಲ್ಲಲ್ಲಿ ವರದಿಗಳು ಮಾಧ್ಯಮಗಳಲ್ಲಿ ಬರುತ್ತಿದೆ. ಅರಭಾವಿ ಕ್ಷೇತ್ರದಿಂದ ನಾನು ಹಾಗೂ ಗೋಕಾಕ ಕ್ಷೇತ್ರದಿಂದ ರಮೇಶ ಜಾರಕಿಹೊಳಿ ಬಿಜೆಪಿಯಿಂದಲೇ ಸ್ಪರ್ಧಿಸಿ, ಜನರ ಪ್ರೀತಿ ಮತ್ತು ಆಶೀರ್ವಾದದಿಂದ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇತ್ತೀಚಿನ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ಧಿಗಳಲ್ಲಿ ತಮ್ಮ ವಿರೋಧಿಗಳ ಪಾತ್ರ ಇದೆ. ಸುಳ್ಳು ವದಂತಿಗಳನ್ನು ಹರಡಿಸುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅರಭಾವಿ ಹಾಗೂ ಗೋಕಾಕ ವಿಧಾನಸಭಾ ಮತಕ್ಷೇತ್ರದ ಸರ್ವಾಂಗೀಣ ಪ್ರಗತಿಗಾಗಿ ಶ್ರಮಿಸುತ್ತಿರುವ ನಾವಿಬ್ಬರೂ ಪಕ್ಷ ಬಿಡುವುದಿಲ್ಲ. ಅಲ್ಲದೇ ಮುಂದಿನ 10 ವರ್ಷಗಳವರೆಗೆ ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿರುತ್ತದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮೀತ ಶಾ ಅವರ ದೂರದೃಷ್ಟಿಯ ಆಡಳಿತವೇ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.