ಬೆಂಗಳೂರು: ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರಕ್ಕೆ (ಡಿ.13) ಮುಂದೂಡಿದೆ.
ಈ ಸಂಬಂಧ ಶಿವಮೂರ್ತಿ ಶರಣರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಶರಣರ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಿಡಿಯೊ ಕಾನ್ಫರೆನ್ಸ್ ಮುಖಾಂತರ ಹಾಜರಾಗಿ, ಎಫ್‌ಐಆರ್ ದಾಖಲಿಸಿದ ನಂತರ ಸಲ್ಲಿಸಿರುವ ಜಾಮೀನು ಅರ್ಜಿಯ ಮಾರ್ಪಾಡು ಮಾಡಲು ಮತ್ತು ಮಾರ್ಪಾಡಾದ ಅರ್ಜಿ ಆಧರಿಸಿ ವಿಚಾರಣೆ ನಡೆಸುವಂತೆ ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಈಗ ಸಲ್ಲಿಸಿರುವ ಜಾಮೀನು ಅರ್ಜಿ ಎಫ್‌ಐಆರ್ ದಾಖಲಾದ ನಂತರ ಹಾಕಿರುವುದು. ಪ್ರಕರಣದಲ್ಲಿ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಹಾಗಾಗಿ, ನ್ಯಾಯಪೀಠ ದೋಷಾರೋಪ ಪಟ್ಟಿಯನ್ನು ಆಧರಿಸಿಯೇ ವಿಚಾರಣೆ ನಡೆಸುತ್ತದೆ. ಒಂದು ವೇಳೆ ಅರ್ಜಿಯನ್ನು
ತಿರಸ್ಕರಿಸಿದರೆ ನೀವು ಸುಪ್ರೀಂ ಕೋರ್ಟ್‌ನಲ್ಲೇ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ. ಆದ್ದರಿಂದ, ಸೆಷನ್ಸ್ ನ್ಯಾಯಾಲಯದಲ್ಲೇ ಪುನಃ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಬಹುದಲ್ಲವೇ’ ಎಂದು ಅದು ಪ್ರಶ್ನಿಸಿತು.
Laxmi News 24×7