ಬೆಳಗಾವಿ, ಡಿಸೆಂಬರ್ 19: ಜನವರಿ 1 ರೊಳಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನ ಪ್ರಕಟಿಸಲು ಸಿದ್ದಪಡಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮುನ್ನ ಪಕ್ಷದ ಆಧಾರ ಸ್ಥಂಭವಾಗಿರುವ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚೆ ಮಾಡಿ ಅವರ ಅಭಿಪ್ರಾಯ ಪಡೆಯಲಾಗುವುದು.
ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಧ್ವನಿ ಪಕ್ಷದ ಧ್ವನಿಯಾಗಬೇಕು ಎಂಬುದು ಈ ಸಮಿತಿಯ ತೀರ್ಮಾನವಾಗಿದೆ.
ಹೀಗಾಗಿ ಇದುವರೆಗೂ ಬಂದಿರುವ ಅರ್ಜಿಗಳನ್ನು ಆಯಾ ಜಿಲ್ಲಾ ಕಾಂಗ್ರೆಸ್ ಗಳಿಗೆ ಕಳುಹಿಸಿಕೊಡುತ್ತೇವೆ. ಜಿಲ್ಲಾ ಕೇಂದ್ರಗಳಲ್ಲಿ ಪ್ರತಿ ಬ್ಲಾಕ್ ಮಟ್ಟದ ನಾಯಕರನ್ನು ಕರೆಸಿ ಚರ್ಚೆ ಮಾಡಲಾಗುವುದು. ರಾಜ್ಯಮಟ್ಟದ ಚುನಾವಣಾ ಸಮಿತಿಯಿಂದ ಇಬ್ಬರು ಸದಸ್ಯರಿಗೆ ಒಂದೊಂದು ಜಿಲ್ಲೆಯ ಜವಾಬ್ದಾರಿಯನ್ನು ನೀಡಲಾಗುವುದು. ಪಕ್ಷದ 5 ಕಾರ್ಯಾಧ್ಯಕ್ಷರು ಹಾಗೂ ಎಐಸಿಸಿ ಕಾರ್ಯದರ್ಶಿಗಳು, ಚುನಾವಣಾ ಸಮಿತಿ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸದಸ್ಯರು, ಪಕ್ಷದ ಪದಾಧಿಕಾರಿಗಳು ಎಲ್ಲರೂ ಸೇರಿ ಚರ್ಚೆ ಮಾಡುತ್ತಾರೆ. ಆದಷ್ಟು ಎಲ್ಲಾ ಕ್ಷೇತ್ರಗಳಲ್ಲಿ ಎಲ್ಲಾ ಟಿಕೆಟ್ ಆಕಾಂಕ್ಷಿಗಳನ್ನು ಸೇರಿಸಿ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಪ್ರಯತ್ನಿಸಲಾಗುವುದು.
ಪ್ರತಿ ಕ್ಷೇತ್ರಗಳಲ್ಲಿ 1 ರಿಂದ 3 ಆಕಾಂಕ್ಷಿಗಳ ಹೆಸರನ್ನು ಪರಿಷ್ಕರಿಸಿ ಕೆಪಿಸಿಸಿಗೆ ಕಳುಹಿಸುವಂತೆ ನಾವು ಸೂಚನೆ ನೀಡಿದ್ದೇವೆ. ಒತ್ತಡ ಹೆಚ್ಚಾಗಿದ್ದ ಸಂದರ್ಭದಲ್ಲಿ ಅಂತಹ ಕ್ಷೇತ್ರಗಳ ವಿಚಾರವನ್ನು ರಾಜ್ಯಮಟ್ಟದಲ್ಲಿ ನಾವು ಕೂತು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ.
ಪಕ್ಷದ ಕಾರ್ಯಕರ್ತರು ನಮ್ಮ ಆಧಾರ ಸ್ಥಂಭವಾಗಿದ್ದು, ಅವರ ಅಭಿಪ್ರಾಯ ಪಡೆದುಕೊಂಡು ಡಿಸೆಂಬರ್ 31ರ ಒಳಗಾಗಿ ಈ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಬೇಕು. ಜನವರಿ 1ರ ಒಳಗಾಗಿ ಎಲ್ಲಾ ಜಿಲ್ಲೆಗಳಿಂದ ಆಯಾ ಜಿಲ್ಲೆಗಳ ಕ್ಷೇತ್ರದ ಪರಿಷ್ಕೃತ ಅರ್ಜಿಗಳ ಪಟ್ಟಿಯನ್ನು ನೀಡಬೇಕು. ನಂತರ ರಾಜ್ಯ ಮಟ್ಟದ ಚುನಾವಣಾ ಸಮಿತಿಯು ಮತ್ತೆ ಸಭೆ ಸೇರಿ ಎಲ್ಲ ಮಾನದಂಡಗಳನ್ನು ಅನುಸರಿಸಿ ಮುಂದಿನ ಪ್ರಕ್ರಿಯೆಯನ್ನು ನಡೆಸಲಿದೆ.