ಬೆಂಗಳೂರು: ಕಾಂಗ್ರೆಸ್ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಅಮಿತ್ ಶಾ ಅವರು ಮುಖ್ಯಮಂತ್ರಿ ಹುದ್ದೆಯನ್ನೇ ₹ 2000 ಕೋಟಿಗೆ ಮಾರಾಟಕ್ಕೆ ಇಟ್ಟಿರುವ ರಾಜಕೀಯ ವ್ಯಾಪಾರಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯದಲ್ಲಿ ಶುಕ್ರವಾರ ನಡೆದ ಜನ ಸಂಕಲ್ಪ ಯಾತ್ರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ್ದ ಅವರು, ‘ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕ ದೆಹಲಿಯ ಎಟಿಎಂ ಆಗಲಿದೆ’ ಎಂದು ಹೇಳಿದ್ದರು. ಅಲ್ಲದೆ, ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರದ ಹಲವು ಆರೋಪ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ‘ಮುಖ್ಯಮಂತ್ರಿ ಹುದ್ದೆಯನ್ನೇ ₹ 2000 ಕೋಟಿಗೆ ಮಾರಾಟಕ್ಕೆ ಇಟ್ಟಿರುವ ರಾಜಕೀಯ ವ್ಯಾಪಾರಿ ಗೃಹಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದು ತಮಾಷೆಯಾಗಿದೆ’ ಎಂದಿದ್ದಾರೆ.