ನವದೆಹಲಿ : 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈ ವರ್ಷ ನಡೆಯಲಿರುವ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳು ಸೆಮಿಫೈನಲ್ ಎಂದು ಪರಿಗಣಿಸಲಾಗಿದೆ. ಪ್ರಮುಖ ರಾಜ್ಯಗಳಾದ ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಈಶಾನ್ಯ ರಾಜ್ಯಗಳಲ್ಲಿ ಈ ವರ್ಷ ಚುನಾವಣೆ ನಡೆಯಲಿದೆ.
ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯದಲ್ಲಿ ಮೊದಲಿಗೆ ವಿಧಾನಸಭೆ ಚುನಾವಣೆ ನಡೆಯಲಿದ್ದು, ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯುವ ಸಾಧ್ಯತೆಯಿದೆ. ಶಾಸಕಾಂಗ ಸಭೆಗಳ ಅವಧಿಯು ಮಾರ್ಚ್‌ನಲ್ಲಿ ವಿವಿಧ ದಿನಾಂಕಗಳಲ್ಲಿ ಕೊನೆಗೊಳ್ಳುತ್ತಿದೆ. ತ್ರಿಪುರಾದಲ್ಲಿ ಬಿಜೆಪಿ ಸರ್ಕಾರವಿದ್ದರೆ, ನಾಗಾಲ್ಯಾಂಡ್‌ನಲ್ಲಿ ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ ಅಧಿಕಾರದಲ್ಲಿದೆ.ಈಶಾನ್ಯದಲ್ಲಿ ರಾಷ್ಟ್ರೀಯ ಪಕ್ಷದ ಮಾನ್ಯತೆ ಹೊಂದಿರುವ ಏಕೈಕ ಪಕ್ಷ ನ್ಯಾಷನಲ್ ಪೀಪಲ್ಸ್ ಪಾರ್ಟಿ ಮೇಘಾಲಯದಲ್ಲಿ ಸರ್ಕಾರವನ್ನು ನಡೆಸುತ್ತಿದೆ.
ಮೂರು ರಾಜ್ಯಗಳ ಚುನಾವಣೆ ಒಟ್ಟಿಗೆ ನಡೆಯಲಿದ್ದು, ನಂತರ ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗದ ಮೂಲಗಳು ಡಿಸೆಂಬರ್‌ನಲ್ಲಿ ಹೇಳಿದ್ದವು.
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯ ಅವಧಿ ಮೇ 24 ರಂದು ಕೊನೆಗೊಳ್ಳಲಿದೆ. ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ಹೊಸ ವಿಧಾನಸಭೆ ರಚನೆಗೆ ಏಪ್ರಿಲ್ ಅಂತ್ಯ ಅಥವಾ ಮೇ ಆರಂಭದಲ್ಲಿ ಚುನಾವಣೆ ನಡೆಯಲಿದೆ.