ಬೆಂಗಳೂರು: ‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ದೊರಕುವ ತನಕ ಹೋರಾಟ ಕೈಬಿಡುವುದಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಇದರ ಮಧ್ಯಸ್ಥಿಕೆ ವಹಿಸಬೇಕು’ ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮನವಿ ಮಾಡಿದರು.
ಸ್ವಾತಂತ್ರ್ಯ ಉದ್ಯಾನದಲ್ಲಿ 15 ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ತಾಯಿ ಮೇಲೆ ಆಣೆ ಮಾಡಿ ಈಗ ಮರೆತಿದ್ದಾರೆ. ಆದ್ದರಿಂದ ಅವರ ಮೇಲಿನ ವಿಶ್ವಾಸ ಸಂಪೂರ್ಣವಾಗಿ ಹೋಗಿದೆ. ಜ.17ರಂದೇ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅವರಿಗೆ ಪತ್ರ ಬರೆದಿದ್ದೇನೆ’ ಎಂದರು.
‘ನಾನು ಪತ್ರ ಬರೆದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಅದರಲ್ಲೂ ಪಂಚಮಸಾಲಿ ಸಮುದಾಯ ಹೆಚ್ಚಿರುವ ಭಾಗಗಳಿಗೇ ಅಮಿತ್ ಶಾ ಭೇಟಿ ನೀಡಿದ್ದಾರೆ. ಪಂಚಮಸಾಲಿ ಸಮುದಾಯ ಬೇಡಿಕೆ ಬಗ್ಗೆ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಸೂಚನೆ ನೀಡಬೇಕು’ ಎಂದು ಒತ್ತಾಯಿಸಿದರು.