ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜೆಡಿಎಸ್ ಎಂಎಲ್ ಸಿ ಎಸ್‌ಎಲ್,ಭೋಜೇಗೌಡ ಅವರು, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಎನ್‌ಎಂಸಿ ಸದಸ್ಯರನ್ನಾಗಿ ನೇಮಿಸಲು ಶಿವಮೊಗ್ಗದ ವೈದ್ಯರೊಬ್ಬರಿಂದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಚೇರಿಯಲ್ಲಿ ಲಂಚ ಪಡೆಯಲಾಗಿದೆ. ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಹರೀಶ್ ಅಯ್ಯಣ್ಣ ಎಂಬುವವರನ್ನು ಎನ್‌ಎಂಸಿ ಸದಸ್ಯರನ್ನಾಗಿ ನೇಮಿಸುವುದಕ್ಕಾಗಿ ಪ್ರಲ್ಹಾದ ಜೋಶಿಯವರ ಕಚೇರಿಯ ಸಿಬ್ಬಂದಿಗೆ 2.5 ಕೋಟಿ ಲಂಚ ನೀಡಿದ್ದಾರೆ ಎಂದು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಉಪಸ್ಥಿತರಿದ್ದರು.
ಎರಡು ಬಾರಿ ನಿರ್ದಿಷ್ಟ ಬ್ಯಾಂಕ್ ಖಾತೆಗೆ 2.5 ಕೋಟಿ ರೂ. ವರ್ಗಾವಣೆಯಾಗಿದ್ದು, 2021ರ ಜುಲೈನಲ್ಲಿ 2 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ. ಉಳಿದ 50 ಲಕ್ಷ ರೂ.
ನಗದು ರೂಪದಲ್ಲಿ ನೀಡಲಾಗಿದೆ. ಹಣ ವರ್ಗಾವಣೆ, ಶಿಫಾರಸು ಪತ್ರ, ಹಣ ಯಾರಿಗೆ ಸಿಕ್ಕಿದೆ ಎಂಬುದಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಯಬೇಕಿದೆ ಎಂದು ಒತ್ತಾಯಿಸಿದರು. ಇದೇ ವೇಳೆ ಹರೀಶ್ ಅಯ್ಯಣ್ಣ ಅವರನ್ನು ಎನ್‌ಎಂಸಿ ಸದಸ್ಯರನ್ನಾಗಿ ನೇಮಕ ಮಾಡಬೇಕೆಂಬ ಕೋರಿಕೆಯನ್ನು ಪರಿಗಣಿಸುವುದಾಗಿ ಆಗ ಕೇಂದ್ರ ಆರೋಗ್ಯ ಸಚಿವರಾಗಿದ್ದ ಡಾ. ಹರ್ಷವರ್ಧನ್ ಅವರು ಪ್ರಲ್ಹಾದ ಜೋಶಿಯವರಿಗೆ ಪತ್ರವನ್ನೂ ಬರೆದಿದ್ದರು ಎಂದು ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಕೇಂದ್ರ ಸಚಿವರ ಪತ್ರಗಳನ್ನು ತೋರಿಸಿದರು.