ಕಲಬುರಗಿ, ಫೆಬ್ರವರಿ 13; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ಏರುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಕಣಕ್ಕಿಳಿದು, ಜನಸೇವೆ ಮಾಡಲು ಹಲವರು ಮುಂದಾಗಿದ್ದಾರೆ. ವಿವಿಧ ಪಕ್ಷಗಳ ಟಿಕೆಟ್ ಪಡೆಯಲು ಕಸರತ್ತು ನಡೆಸುತ್ತಿದ್ದಾರೆ. ಏಪ್ರಿಲ್ ಅಥವ ಮೇನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ.
ವಿಜಯಪುರದ ವ್ಯಕ್ತಿಯೊಬ್ಬರು ಜನಸೇವೆ ಮಾಡಲು ಜಡ್ಜ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಸಮ್ಮುಖದಲ್ಲಿ ಜೆಡಿಎಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.
ಚಿತ್ತಾಪುರ ಕಿರಿಯ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರಾಗಿ ಉತ್ತಮವಾಗಿ ಸೇವೆ ಸಲ್ಲಿಸಿ ಪ್ರಸಿದ್ಧಿಯಾಗಿದ್ದ ಡಾ. ಸುಭಾಶ್ಚಂದ್ರ ರಾಠೋಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜನರ ಸೇವೆ ಮಾಡಲು ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಿಂದ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ.
ಜಡ್ಜ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಎಂಟ್ರಿಯಾಗಿರುವುದು ಅಚ್ಚರಿ ಉಂಟು ಮಾಡಿದೆ. ಚಿತ್ತಾಪುರದ ಹಾಲಿ ಶಾಸಕರು ಕಾಂಗ್ರೆಸ್‌ನ ಪ್ರಿಯಾಂಕ್ ಖರ್ಗೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರನಿಗೆ ಈ ಬಾರಿಯ ಚುನಾವಣೆಯಲ್ಲಿಯೂ ಟಿಕೆಟ್ ಸಿಗುವುದರಲ್ಲಿ ಯಾವುದೇ ಅನುಮಾನ ಬೇಡ.
Laxmi News 24×7