ಬೆಂಗಳೂರು: ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಕೆ.ಎಸ್. ಕಿರಣ್ ಕುಮಾರ್ , ವಿಧಾನ ಪರಿಷತ್ ಮಾಜಿ ಸದಸ್ಯ, ಜೆಡಿಎಸ್ ತ್ಯಜಿಸಿ ಬಿಜೆಪಿ ಸೇರಿದ್ದ ಸಂದೇಶ್ ನಾಗರಾಜ್ ಮತ್ತು ತುಮಕೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್‌ನ ಎಚ್. ನಿಂಗಪ್ಪ ಅವರು ಸೋಮವಾರ ಕಾಂಗ್ರೆಸ್ ಸೇರಿದರು.
ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸಮ್ಮುಖದಲ್ಲಿ ಈ ಮೂವರೂ ತಮ್ಮ ಬೆಂಬಲಿಗರ ಜೊತೆ ‘ಕೈ’ ಹಿಡಿದರು. ಶಾಸಕ ಜಿ. ಪರಮೇಶ್ವರ, ಮಾಜಿ ಸಂಸದ ಕೆ.ಎಚ್. ಮುನಿಯಪ್ಪ, ಮುಖಂಡರಾದ ಕೆ.ಎನ್. ರಾಜಣ್ಣ ಇದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ರಾಜ್ಯದಲ್ಲಿ ಕಾಂಗ್ರೆಸ್‌ಗೆ ಒಳ್ಳೆಯ ವಾತಾವರಣ ಇದೆ. ಹೀಗಾಗಿ ಹಲವರು ಕಾಂಗ್ರೆಸ್ ಕಡೆ ಮುಖ ಮಾಡುತ್ತಿದ್ದಾರೆ. ಬೇರೆ ಪಕ್ಷಗಳ ಬಹಳ ಜನ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ. ಜೊತೆಗೆ ಮಂತ್ರಿಯಾಗಿದ್ದ ಕೆಲವರು ಸೇರುವ ಸಂಭವ ಇದೆ’ ಎಂದರು.