ಕೋಲಾರ: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ರಾಜಕಾರಣದತ್ತ ಗಮನ ಹರಿಸುವಂತೆ ಕೆಪಿಸಿಸಿ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು ಅಭಿಮತ ವ್ಯಕ್ತಪಡಿಸಿದ್ದಾರೆ ಎಂದು ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಹೇಳಿದ್ರು.
ಕೋಲಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು ಜೊತೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲವೆಂದು ಸ್ಪಷ್ಟಪಡಿಸಿದ್ರು. ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ರಾಜ್ಯ ರಾಜಕೀಯಕ್ಕೆ ಬರುವಂತೆ ತಿಳಿಸಿದ್ದಾರೆ ಎಂದರು.
ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದರ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತಾರೆ. ಹಾಗಾಗಿ ಇದರ ಬಗ್ಗೆ ಸದ್ಯ ನಾನು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದರು. ಕೇಂದ್ರದಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದೇನೆ. ಅಲ್ಲಿ ಹೈಕಮಾಂಡ್ ತೀರ್ಮಾನ ಕೈಗೊಳ್ಳಬೇಕಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕಟ್ಟಬೇಕಾಗಿದ್ದು, ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷರು ತಮಗೆ ಆಹ್ವಾನ ನೀಡಿರುವುದು ನಿಜ ಎಂದು ಹೇಳಿದರು.
ಎಲ್ಲವೂ ಅಂದುಕೊಂಡಂತೆ ನಡೆದ್ರೆ ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಕುರಿತು ಚಿಂತನೆ ನಡೆಯುತ್ತಿದ್ದು, ಗುಟ್ಟು ಬಿಟ್ಟು ಕೊಡದ ಮುನಿಯಪ್ಪ ಎಲ್ಲವೂ ಹೈಕಮಾಂಡ್ ನಿರ್ಧಾರ ಮಾಡಲಿದೆ ಎನ್ನುತ್ತ ಜಾರಿಕೊಂಡಿದ್ದಾರೆ. ಆದರೆ ವಿಧಾನಸಭೆಯಲ್ಲಿ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚಿಸಿದರೆ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡುವುದಾಗಿ ತಿಳಿಸುವ ಮೂಲಕ ಮುಂದೆ ದಲಿತ ಸಿಎಂ ಸೇರಿದಂತೆ ಎಡಗೈ ಕೋಟಾದಲ್ಲಿ ರಾಜ್ಯದಲ್ಲಿ ತಮ್ಮ ಹಿಡಿತ ಸಾಧಿಸಲು ಮುನಿಯಪ್ಪ ಮಾಸ್ಟರ್ ಪ್ಲಾನ್ ಮಾಡಿರುವುದಂತೂ ಸುಳ್ಳಲ್ಲ ಎಂದು ಹೇಳಲಾಗುತ್ತಿದೆ.